ಬೆಂಗಳೂರು : ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಸಂಬಂಧ ಪಟ್ಟ ಎಲ್ಲಾ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಗಂಭೀರವಾಗಿ ಆಲಿಸಿ ಸಮಸ್ಯೆಗಳನ್ನು ಪರಿಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಉಚ್ಛನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು ಹಾಗೂ ಕರ್ನಾಟಕ ರಾಜ್ಯ ಕಾನೂನೂ ಸೇವೆಗಳ ಪ್ರಾಧಿಕಾರದ ನ್ಯಾಯಮೂರ್ತಿಗಳಾದ ಎ.ಎನ್. ವೇಣುಗೋಪಾಲಗೌಡ ನಿರ್ದೇಶನ ನೀಡಿದರು.
ಹೆಚ್. ಸಿದ್ದಯ್ಯ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ “ನ್ಯಾಯದೇಗುಲ” ಸಭಾಂಗಣದಲ್ಲಿ, ರಾಜ್ಯದಲ್ಲಿರುವ ಅಂಗನವಾಡಿ ಕೇಂದ್ರಗಳ ಸಮಸ್ಯೆಗಳ ಬಗ್ಗೆ ಚರ್ಚಿಸುವ ಸಲುವಾಗಿ ಕರೆಯಲಾಗಿದ್ದ ಸಭೆಯಲ್ಲಿ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಜೊತೆ ಜೊತೆಯಲ್ಲಿಯೇ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಹ ಭೇಟಿ ನೀಡಿ ಅಲ್ಲಿನ ಮಕ್ಕಳ ಮತ್ತು ಗರ್ಭಿಣಿ ಸ್ತ್ರೀಯರ ಹಾಗೂ ಬಾಣಂತಿಯರ ಆರೋಗ್ಯದ ಬಗ್ಗೆ ತಪಾಸಣೆ ನಡೆಸಲು ತಿಳಿಸಿದರು. ಅಲ್ಲದೇ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧಿಕಾರಿಗಳು ಸಹ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಪರಿಹರಿಸುವಂತೆ ತಿಳಿಸಿದರು.
ಕೆಲವು ಕಡೆ ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಅದರೆ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರು ಅಂಗನವಾಡಿ ಕೇಂದ್ರಗಳ ಬಾಡಿಗೆಯನ್ನು ಸರಿಯಾಗಿ ಪಾವತಿ ಮಾಡದೆ ಇರುವುದರಿಂದ ಅಲ್ಲಿ ಸಮಸ್ಯೆಗಳು ಉದ್ಭವವಾಗುತ್ತಿವೆ. ಆದ್ದರಿಂದ ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಹೆಚ್ಚಿನ ನಿಗಾ ವಹಿಸಿ ಸಕಾಲದಲ್ಲಿ ಬಾಡಿಗೆ ಪಾವತಿಗೆ ಕ್ರಮ ವಹಿಸುವಂತೆ ಹೇಳಿದರು.
ಹಲವಾರು ಅಂಗನವಾಡಿ ಕೇಂದ್ರಗಳು ಶಿಥಿಲಾವಸ್ಥೆಯಲ್ಲಿವೆ. ಕೂಡಲೇ ಅವುಗಳನ್ನು ಸ್ಥಳಾಂತರಿಸಲು ಕಟ್ಟಡಗಳನ್ನು ಗುರುತಿಸಿ ಕೂಡಲೇ ಸ್ಥಳಾಂತರ ಮಾಡಿ. ಗಣನೀಯ ಸಂಖ್ಯೆಯ ಅಂಗನವಾಡಿ ಕೇಂದ್ರಗಳು ಅತ್ಯಂತ ಕಿರಿದಾದ ಜಾಗದಲ್ಲಿ ಕಾರ್ಯನಿರ್ವಹಿಸುತ್ತಿವೆ. ಅವುಗಳನ್ನು ಗುರುತಿಸಿ ಅಂತಹ ಕಟ್ಟಡಗಳನ್ನು ಬೇರೆ ಕಡೆ ಸ್ಥಳಾಂತರ ಮಾಡಲು ಜಾಗ ಗುರುತಿಸಿ ಸ್ಥಳಾಂತರ ಮಾಡಲು ಕ್ರಮ ವಹಿಸುವಂತೆ ತಿಳಿಸಿದರು.
ಕೆಲವು ಕಡೆ ಅಂಗನವಾಡಿ ಕೇಂದ್ರಗಳಲ್ಲಿ ನೈರ್ಮಲ್ಯ ಮತ್ತು ಸ್ವಚ್ಛತೆಯನ್ನು ಕಾಪಾಡುತ್ತಿಲ್ಲ, ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಗಮನ ಹರಿಸಿ ಸ್ವಚ್ಛತೆಯನ್ನು ಕಾಪಾಡುವಂತೆ ಅರಿವು ಮೂಡಿಸಲು ಕ್ರಮವಹಿಸಿ. ಮೇಲ್ವಿಚಾರಕರು ಮತ್ತು ಸಿ.ಡಿ.ಪಿ.ಒ ಗಳು ಅಂಗನವಾಡಿ ಕೇಂದ್ರಗಳಿಗೆ ನಿಯಮಿತವಾಗಿ ಭೇಟಿ ನೀಡದೇ ಇರುವುದು ಕಂಡುಬಂದಿದ್ದು, ಮೇಲ್ವಿಚಾರಕರು ಮತ್ತು ಸಿ.ಡಿ.ಪಿ.ಒ ಗಳು ನಿಯಮಿತವಾಗಿ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸುವಂತೆ ಸೂಚಿಸಿದರು.
ಕೆಲವು ಅಂಗನವಾಡಿ ಕಾರ್ಯಕರ್ತೆಯರು ವಿಶೇಷ ಚೇತನರನ್ನು ಕೇಂದ್ರಗಳಿಗೆ ದಾಖಲಿಸಿಕೊಳ್ಳಲು ನಿರಾಕರಿಸುತ್ತಿದ್ದಾರೆ. ಈ ಬಗ್ಗೆ ವಿಶೇಷ ಗಮನ ಹರಿಸಿ ವಿಶೇಷ ಚೇತನರನ್ನು ಅಂಗನವಾಡಿ ಕೇಂದ್ರಗಳಿಗೆ ದಾಖಲಿಸಿಕೊಳ್ಳುವಂತೆ ಸಂಬಂಧಿಪಟ್ಟ ಅಂಗನವಾಡಿ ಕಾರ್ಯಕರ್ತರಿಗೆ ಸೂಚನೆಗಳನ್ನು ನೀಡಲು ತಿಳಿಸಲಾಯಿತು.
ಅಂಗನವಾಡಿ ಕೇಂದ್ರಗಳಿಗೆ ಕಳಪೆ ಗುಣಮಟ್ಟದ ಆಹಾರವನ್ನು ಪೂರೈಸಲಾಗುತ್ತಿದೆ. ಕೆಲವು ಕಡೆ ಅಂಗನವಾಡಿ ಕಾರ್ಯಕರ್ತೆಯರು ಆಹಾರ ಪದಾರ್ಥಗಳ ಮುಕ್ತಾಯ ದಿನಾಂಕವನ್ನು ಪರಿಶೀಲಿಸದೆಯೇ ಅವುಗಳನ್ನು ಬಳಸುತ್ತಿದ್ದಾರೆ. ಇದರಿಂದ ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮಗಳನ್ನು ಬೀರುತ್ತವೆ. ಆಹಾರ ಸುರಕ್ಷತಾ ಇಲಾಖೆ ಕೇಂದ್ರಗಳಿಗೆ ಭೇಟಿ ನೀಡಿ ಅಂಗನವಾಡಿ ಕೇಂದ್ರಗಳಲ್ಲಿ ಬಳಸುವ ಆಹಾರ ಪದಾರ್ಥಗಳನ್ನು ಪರಿಶೀಲಿಸಿ. ಕಳಪೆ ಗುಣಮಟ್ಟದ ಆಹಾರಗಳ ಪೂರೈಕೆ ಬಗ್ಗೆ ತಪಾಸಣೆ ನಡೆಸಿ ವರದಿ ಸಲ್ಲಿಸಿ. ಅಲ್ಲದೇ ಅವಧಿ ಮುಗಿದ ಆಹಾರ ಪದಾರ್ಥಗಳನ್ನು ಬಳಕೆ ಮಾಡದಂತೆ ಸೂಚನೆ ನೀಡಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಅಂಗನವಾಡಿ ಕೇಂದ್ರಗಳಿಗೆ ಆರೋಗ್ಯ ತಪಾಸಣೆ ನಡೆಸಲು ವೈದ್ಯಕೀಯ ತಂಡವು ನಿಯಮಿತವಾಗಿ ಕೇಂದ್ರಗಳಿಗೆ ಭೇಟಿ ನೀಡುತ್ತಿಲ್ಲ ಈ ಬಗ್ಗೆ ಹೆಚ್ಚಿನ ಗಮನ ಹರಿಸಿ. ಯಾವುದೇ ರೀತಿಯ ಕಾರಣಗಳನ್ನು ನೀಡದೇ ನಿಯಮಿತವಾಗಿ ವೈದ್ಯಕೀಯ ತಂಡವು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸುವಂತೆ ಸೂಚಿಸಿದರು.
ಪೌಷ್ಟಿಕಾಂಶಗಳಿಂದ ಕೂಡಿರುವ ರೀತಿಯ ಆಹಾರ ಪದಾರ್ಥಗಳನ್ನು ಪೂರೈಸಲು ಸೂಚಿಸಲಾಯಿತು. ಅಲ್ಲದೇ ಅಂಗನವಾಡಿ ಕಾರ್ಯಕರ್ತೆಯರು ಅಂಗನವಾಡಿ ಕೇಂದ್ರಗಳನ್ನು ತೆರೆಯುವ ಮತ್ತು ಮುಚ್ಚುವ ಬಗ್ಗೆ ಸೂಕ್ತವಾದ ಮಾರ್ಗದರ್ಶನ ನೀಡಲು ತಿಳಿಸಲಾಯಿತು.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮೇಜರ್ ಪಿ. ಮಣಿವಣ್ಣನ್ ಮಾತನಾಡಿ, ಕೆಲವು ಕಡೆ ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಸ್ಥಳ ದೊರೆಯದೇ ಇರುವುದು ತಿಳಿದುಬಂದಿದ್ದು, ಬಿ.ಡಿ.ಎ. ವ್ಯಾಪ್ತಿಯಲ್ಲಿ ಅಗತ್ಯವಿರುವ ಸ್ಥಳಗಳನ್ನು ಗುರುತಿಸಿ ನೀಡಿದಲ್ಲಿ ಅದನ್ನು ಪ್ರಾಧಿಕಾರದ ಸಭೆಯ ಮುಂದೆ ಮಂಡಿಸಿ ಸೂಕ್ತ ರೀತಿಯಲ್ಲಿ ಸ್ಥಳವಕಾಶವನ್ನು ಕಲ್ಪಿಸಿಕೊಡಲಾಗುವುದು ಎಂದು ತಿಳಿಸಿದರು. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಕೂಡಲೇ ಬಿ.ಡಿ.ಎ ಅಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಲಾಯಿತು.

