ಮೈಸೂರು : ಇನ್ನೂ ಬೇಸಿಗೆಯೇ ಶುರವಾಗಿಲ್ಲ. ಆದರೆ, ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಮೈಸೂರು ಜಿಲ್ಲೆಯಲ್ಲಿ ಹೋರಾಟ ಆರಂಭವಾಗಿದೆ. ಕೆರೆಕಟ್ಟೆಗಳಿಗೆ ನೀರು ತುಂಬಿಸಲು ಕಾಡಾ ಕಚೇರಿಗೆ ರೈತರ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ನಂಜನಗೂಡು ಪಟ್ಟಣಕ್ಕೆ ಹೊಂದಿಕೊಂಡಂತೆ ಇರುವ ಹುಲ್ಲಹಳ್ಳಿ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಆಗ್ರಹಿಸಿ ಗ್ರಾಮ ಪಂಚಾಯ್ತಿಗೆ ಕಚೇರಿಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದರು.
ಕೆರೆ ಕಟ್ಟೆಗಳಿಗೆ ನೀರು ತುಂಬಿಸುವಂತೆ ಆಗ್ರಹಿಸಿ ರೈತರು ಮೈಸೂರು ನಗರದ ಕಾಡಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಹಳ್ಳೆಕೆರೆ ಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ರಾಜ್ಯಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ರೈತರು, ಬೇಸಿಗೆ ಆರಂಭವಾಗುತ್ತಿದೆ, ಅಂತರ್ಜಲದ ಮಟ್ಟ ಕುಸಿಯುತ್ತಿದೆ. ಜನಜಾನುವಾರುಗಳಿಗೆ ನೀರಿನ ಹಾಹಾಕಾರ ಶುರುವಾಗಿದೆ. ಕೂಡಲೇ ಜಿಲ್ಲಾಡಳಿತಗಳು ನಾಲೆಗಳ ಮೂಲಕ ನೀರು ತುಂಬಿಸಬೇಕು ಎಂದು ಆಗ್ರಹಿಸಿದರು..
ಜಿಲ್ಲಾ ಉಸ್ತುವಾರಿ ಸಚಿವರು ಮುಖ್ಯಮಂತ್ರಿ ಹಿಂಬಾಲಕರಾಗುವುದನ್ನು ಬಿಟ್ಟು ರೈತರ ಹಿತ ಕಾಯಬೇಕು. ಇಲ್ಲವಾದರೆ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಕಪಿಲಾ ನದಿ ತೀರದಲ್ಲಿ ಇರುವ ನಂಜನಗೂಡು ಪಟ್ಟಣಕ್ಕೆ ಹೊಂದಿಕೊಂಡಿರುವ ಹುಲ್ಲಹಳ್ಳಿ ಗ್ರಾಮಸ್ಥರು ಗ್ರಾಮ ಪಂಚಾಯ್ತಿಯ ಪಿಡಿಓ ಕಛೇರಿಗೆ ಬೀಗ ಜಡಿದು ಪಿಡಿಓ, ಸಿಬ್ಬಂದಿ ತೆರಳದಂತೆ ತಡೆದರು. ಕಳೆದ ಆರೇಳು ತಿಂಗಳುಗಳಿಂದ ಹುಲ್ಲಹಳ್ಳಿ ಗ್ರಾಮದ ಆರು, ಏಳನೆಯ ವಾರ್ಡ್ ಗಳಲ್ಲಿ ನೀರಿಗಾಗಿ ಪರದಾಡುತ್ತಿದ್ದಾರೆ.
ಜಾನುವಾರುಗಳಿಗೂ ಕುಡಿಯುವ ನೀರಿಗೆ ಬರ ಎದುರಾಗಿದೆ. ಕುಡಿಯುವ ನೀರು ಪೂರೈಸಲು ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಸಂಪೂರ್ಣ ವಿಫಲರಾಗಿದ್ದಾರೆ. ಎಷ್ಟೇ ಮನವಿ ಮಾಡಿದರೂ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ. ಗ್ರಾಮದ ಸಮೀಪದಲ್ಲೇ ಕಪಿಲಾ ನದಿ ಹಾದು ಹೋಗಿದ್ದರೂ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು

