ಬೆಂಗಳೂರು: ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀತಿ ಉಂಟಾಗಿದೆ. ಆಲಮಟ್ಟಿ ಅಣೆಕಟ್ಟೆಗೆ ಹರಿದುಬರುತ್ತಿರುವ ನೀರಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 2 ಲಕ್ಷ ಕ್ಯೂಸೆಕ್ಸ್ ನೀರು ಹೊರಗೆ ಬಿಡಲಾಗಿದೆ.
ಭಾರೀ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿತೀರದಲ್ಲಿ ಪ್ರವಾಹದ ಭೀತಿ ಆವರಿಸಿದೆ. ಕೃಷ್ಣಾ ನದಿ ತೀರಕ್ಕೆ ತೆರಳದಂತೆ ಜಿಲ್ಲಾಡಳಿತ ಗ್ರಾಮಸ್ಥರಿಗೆ ಎಚ್ಚರಿಕೆ ನೀಡಲಾಗಿದೆ.
ಕೃಷ್ಣಾ ನದಿಗೆ ಭಾರೀ ಪ್ರಮಾಣದ ನೀರು ಬಿಡುಗಡೆ ಪರಿಣಾಮವಾಗಿ ರಾಯಚೂರು ಜಿಲ್ಲೆ ಲಿಂಗಸುಗೂರಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ.
ನದಿ ಪಾತ್ರದ ಗ್ರಾಮಗಳಲ್ಲಿ ಪ್ರವಾಹದ ಭೀತಿ ಉಂಟಾಗಿದ್ದು, ನಡುಗಡ್ಡೆ ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ. ಈ ಗ್ರಾಮಗಳ ಜನರು ಹೊರಜಗತ್ತಿನೊಂದಿಗೆ ಸಂಪರ್ಕ ಕಡಿದುಕೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಹಂಚಿನಾಳ, ಯರಗೋಡಿ, ಯಳಗುಂದಿ, ಕಡದರಗಡ್ಡಿ ಸೇರಿ ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಈ ಭಾಗದಲ್ಲಿ ನದಿಗೆ ಅಳವಡಿಸಿದ್ದ ಪಂಪ್ ಸೆಟ್ ಗಳು ಸಂಪೂರ್ಣ ಜಲಾವೃತಗೊಂಡಿವೆ.
ಕೃಷ್ಣಾ ನದಿ ತೀರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ನದಿಪಾತ್ರದ ಜನರು ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.