ದೀಪಾವಳಿ ಹಬ್ಬಕ್ಕೆ ಬೆಂಗಳೂರಿನಿಂದ 2000 ವಿಶೇಷ ಬಸ್‌ ವ್ಯವಸ್ಥೆ : KSRTC

Most read

ಬೆಂಗಳೂರು : ಮುಂದಿನ ವಾರ ಬರಲಿರುವ ದೀಪಾವಳಿ ಹಬ್ಬದ ವಿಶೇಷವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ಹೊರಡುವ ಪ್ರಯಾಣಿಕರಿಗೆ ವಿಶೇಷ ಬಸ್‌ ವ್ಯವಸ್ಥೆ ಬಿಡಲಾಗುತ್ತದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.

ಇದೇ ತಿಂಗಳ ಕೊನೆಯ ದಿನ ಅಕ್ಟೋಬರ್‌ 31 ನರಕ ಚತುರ್ದಶಿ, ನವೆಂಬರ್‌ 1 ಕನ್ನಡ ರಾಜ್ಯೋತ್ಸವ ಹಾಗೂ ನವೆಂಬರ್‌ 2ರಂದು ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿಯು ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್‌ 30ರಿಂದ ನವೆಂಬರ್‌ 1ರವರೆಗೆ ಬೆಂಗಳೂರಿನಿಂದ ಬಹುತೇಕ ಸ್ಥಳಗಳಿಗೆ ಸುಮಾರು 2,000 ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಮಾಡಿದೆ.

ಜೊತೆಗೆ ಇದಾದ ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಾಪಸ್ಸು ಬರುವ ಪ್ರಯಾಣಿಕರಿಗೆ ನವೆಂಬರ್‌ 3 ಹಾಗೂ 4ರಂದು ವಿಶೇಷ ಬಸ್‌ ವ್ಯವಸ್ಥೆ ಮಾಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್‌ ಇರಲಿದೆ.

ಮೈಸೂರು ರಸ್ತೆಯ ಸ್ಯಾಟಲೈಟ್‌ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ವಿಶೇಷ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ.

ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರು, ತಿರುಚ್ಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಸಾರಿಗೆ ಸಂಸ್ಥೆಯ ಪ್ರತಿಷ್ಠಿತ ಬಸ್‌ಗಳು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಹೊರಡಲಿವೆ.

ಪ್ರಯಾಣಿಕರ ಅನುಕೂಲಕ್ಕಾಗಿ ಬಸ್‌ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಟಿಕೆಟ್‌ ಕಾಯ್ದಿರಿಸಿಕೊಳ್ಳಯವ ಅವಕಾಶವನ್ನು ಸಹ ನೀಡಿದೆ. ಜೊತೆಗೆ ಮೊದಲ ಪಿಕ್‌ ಆಪ್‌ ಪಾಯಿಂಟ್‌ ಅನ್ನು ಗುರುತಿಟ್ಟುಕೊಳ್ಳುವಂತೆ ಸೂಚನೆ ನೀಡಿದೆ.

ಇ-ಟಿಕೆಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್‌ಸೈಟ್‌ ಮುಖಾಂತರ ಮಾಡಬಹುದಾಗಿದೆ.

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇ. 5ರಷ್ಟು ರಿಯಾಯಿತಿ, ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಲ್ಲಿ ಬರುವ ಪ್ರಯಾಣ ದರದಲ್ಲಿ ಶೇ. 10ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಸಂಸ್ಥೆಯು ಹೇಳಿದೆ.

ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೆರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಬಸ್‌ಗಳಲ್ಲಿ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.

More articles

Latest article