ಬೆಂಗಳೂರು: ಮಿನಿ ಸಮರ ಎಂದೇ ಪರಿಗಣಿಸಿರುವ ರಾಜ್ಯದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳ ಉಪ ಚುನಾವಣೆಗೆ ಮತದಾನ ನಡೆಯುತ್ತಿದೆ. ಮಧ್ಯಾಹ್ನ1 ಗಂಟೆಯವರೆಗೆ ಚನ್ನಪಟ್ಟಣದಲ್ಲಿ ಶೇ.48, ಶಿಗ್ಗಾಂವಿಯಲ್ಲಿ ಶೇ.43.50, ಸಂಡೂರು ಕ್ಷೇತ್ರದಲ್ಲಿ ಶೇ. 43.46ರಷ್ಟು ಮತದಾನವಾಗಿದೆ.
ಕೆಲವು ಮತಗಟ್ಟೆಗಳಲ್ಲಿ ಮೊಬೈಲ್ ತೆಗೆದುಕೊಂಡು ಹೋಗಲು ಅವಕಾಶ ನಿರಾಕರಿಸಲಾಗಿತ್ತು. ಮತದಾನಕ್ಕೆ ಸಾಕಷ್ಟು ಕಾಲಾವಕಾಶ ಇದ್ದು ಮತದಾರರು ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಮತ್ತು ಎನ್ ಡಿಎ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಸ್ಪರ್ಧೆ ಇದೆ.
ಮೂರು ಕ್ಷೇತ್ರಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ವಿಶೇಷವಾಗಿ ಯುವಕರು ಉತ್ಸಾಹದಿಂದ ಮತದಾನದಲ್ಲಿ ಭಾಗವಹಿಸುತ್ತಿದ್ದಾರೆ. ಹಿರಿಯ ನಾಗರೀಕರೂ ಸಹ ಆಸಕ್ತಿಯಿಂದ ಮತಗಟ್ಟೆಗಳಿಗೆ ಆಗಮಿಸುತ್ತಿದ್ದಾರೆ.
ಮತದಾನಕ್ಕೂ ಮುನ್ನ ಅಭ್ಯರ್ಥಿಗಳು ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿ ಗೆಲುವಿಗೆ ಪ್ರಾರ್ಥಿಸಿದರು.
ಈ ಮೂರೂ ಕ್ಷೇತ್ರಗಳ ಉಪ ಚುನಾವಣೆಯನ್ನು ಆಡಳಿತಾರೂಢ ಕಾಂಗ್ರೆಸ್, ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಪ್ರತಿಷ್ಠೆಯಾಗಿ ಪರಿಗಣಸಿವೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಮೂರು ಪಕ್ಷಗಳ ನಾಯಕರು ಅಬ್ಬರದ ಪ್ರಚಾರ ನಡೆಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಕೇಂದ್ರ ಸಚಿವ ಎಚ್.ಡಿ. ಕುಮಾರ ಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್. ಅಶೋಕ್, ಬಿ.ಎಸ್.ಯಡಿಯೂರಪ್ಪ ಮತ್ತು ಇಡೀ ರಾಜ್ಯ ಸಚಿವ ಸಂಪುಟದ ಸದಸ್ಯರು ಪ್ರಚಾರದಲ್ಲಿ ಭಾಗಿಯಾಗಿದ್ದರು.
ಚನ್ನಪಟ್ಟಣದಲ್ಲಿ ಎನ್ ಡಿಎ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್ ನಿಂದ ಸಿ. ಪಿ. ಯೋಗೇಶ್ವರ್ ಸೇರಿದಂತೆ 31 ಮಂದಿ ಕಣದಲ್ಲಿದ್ದಾರೆ. ಶಿಗ್ಗಾಂವಿಯಲ್ಲಿ ಬಿಜೆಪಿಯಿಂದ ಭರತ್ ಬೊಮ್ಮಾಯಿ, ಕಾಂಗ್ರೆಸ್ ನಿಂದ ಪಠಾಣ್ ಯಾಸೀರ್ ಅಹ್ಮದ್ ಖಾನ್ ಸೇರಿದಂತೆ 8 ಅಭ್ಯರ್ಥಿಗಳಿದ್ದಾರೆ. ಸಂಡೂರಲ್ಲಿ ಕಾಂಗ್ರೆಸ್ ನ ಇ. ಅನ್ನಪೂರ್ಣ, ಬಿಜೆಪಿಯಿಂದ ಬಂಗಾರು ಹನುಮಂತ ಸೇರಿ 6 ಹುರಿಯಾಳುಗಳು ಕಣದಲ್ಲಿದ್ದಾರೆ.
ಸಂಡೂರು ಕ್ಷೇತ್ರದಲ್ಲಿ 1,18,279 ಮಹಿಳಾ 1,17,739 ಪುರುಷ ಸೇರಿ ಒಟ್ಟು 2,36,047 ಮತದಾರರಿದ್ದಾರೆ. ಚನ್ನಪಟ್ಟಣ ಕ್ಷೇತ್ರದಲ್ಲಿ 2,32,949 ಮತದಾರರಿದ್ದು 1,20,617 ಮಹಿಳಾ ಮತ್ತು 1,12,324 ಪುರುಷ ಮತದಾರರಿದ್ದಾರೆ.
ಶಿಗ್ಗಾಂವಿ ಕ್ಷೇತ್ರದಲ್ಲಿ 1,16,076 ಮಹಿಳಾ, 1,21,443 ಪುರುಷ ಸೇರಿ ಒಟ್ಟು 2,37,525 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.
ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿರುವ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಇನ್ನಿಲ್ಲದ ಕಸರತ್ತುಗಳಲ್ಲಿ ತೊಡಗಿಸಿಕೊಂಡಿದ್ದರು.
ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗೆ ಚುನಾವಣಾ ಆಯೋಗ ಸಕಲ ಸಿದ್ದತೆಗಳನ್ನು ಮಾಡಿದೆ. ಯಾವುದೇ ಕ್ಷೇತ್ರದಲ್ಲಿ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಮೂರೂ ಕ್ಷೇತ್ರಗಳಲ್ಲಿ ಬಿಗಿ ಭದ್ರತೆ ವಹಿಸಲಾಗಿದೆ. ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.