ರಾಜ್ಯದ ಲೋಕಸಭಾ ಚುನಾವಣೆಯ 2ನೇ ಹಂತದ 14 ಕ್ಷೇತ್ರಗಳಲ್ಲಿ ನಡೆದ ಅಬ್ಬರ ಬಹಿರಂಗ ಪ್ರಚಾರಕ್ಕೆ ಭಾನುವಾರ ಸಂಜೆ ತೆರೆಬಿದ್ದಿದ್ದು, ಸೋಮವಾರ ಅಭ್ಯರ್ಥಿಗಳು ಮನೆ-ಮನೆ ಪ್ರಚಾರ ನಡೆಸಿ ಮತಯಾಚನೆ ಮಾಡಲಿದ್ದಾರೆ.
ಮಂಗಳವಾರ ಬೆಳಿಗ್ಗೆ 7 ಗಂಟೆಯಿಂದ 14 ಕ್ಷೇತ್ರಗಳ ಮತದಾನ ಆರಂಭವಾಗುವ ಹಿನ್ನೆಲೆಯಲ್ಲಿ ಭಾನುವಾರ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. ಸೋಮವಾರ ಇಡೀ ದಿನ ಅಭ್ಯರ್ಥಿಗಳು ಮತ್ತು ಬೆಂಬಲಿಗರು ಮನೆ ಮನೆ ಪ್ರಚಾರ ನಡೆಸಲಿದ್ದಾರೆ.
ರಾಜ್ಯದಲ್ಲಿ ಗಮನ ಸೆಳೆದಿರುವ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ(ಎಸ್ಸಿ ಮೀಸಲು), ಕಲಬುರಗಿ(ಎಸ್ಸಿ), ರಾಯಚೂರು(ಎಸ್ಟಿ ಮೀಸಲು), ಬೀದರ್, ಕೊಪ್ಪಳ, ಬಳ್ಳಾರಿ(ಎಸ್ಟಿ), ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಶೋರಾಪುರ ವಿಧಾನಸಭಾ ಕ್ಷೇತ್ರಕ್ಕೂ ನಾಳೆಯೇ ಚುನಾವಣೆ ನಡೆಯಲಿದೆ.
ಒಟ್ಟು 2,59,52,958 ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ. ಇದರಲ್ಲಿ 1,29,48,978 ಪುರುಷ, 1,29,66,570 ಮಹಿಳೆಯರಿದ್ದು, 1935 ಇತರೆ, 35,465 ಸೇವಾ ಮತದಾರರಿದ್ದಾರೆ.