ಮನೆ ಕೆಲಸದ ಮಹಿಳೆಯ ಅಪಹರಣ ಆರೋಪದಲ್ಲಿ ಶಾಸಕ ಹೆಚ್.ಡಿ.ರೇವಣ್ಣ ಅವರಿಗೆ ಮಂಜೂರಾಗಿರುವ ಜಾಮೀನು ರದ್ದುಕೋರಿ ವಿಶೇಷ ತನಿಖಾ ದಳ (ಎಸ್ಐಟಿ) ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಎಸ್ಐಟಿ ಸಲ್ಲಿಸಿರುವ ಅರ್ಜಿ ಮೇ 31ರಂದು ವಿಚಾರಣೆಗೆ ಬರುವ ಸಾಧ್ಯತೆಯಿದೆ.
ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಎದುರಾಗುತ್ತಿದ್ದಂತೆ ಮಹಿಳೆಯೊಬ್ಬರು ನಾಪತ್ತೆಯಾಗಿದ್ದರು. ಈ ಕುರಿತು ಮಹಿಳೆಯ ಮಗ, ಕೆ.ಆರ್.ನಗರದ ಪೊಲೀಸ್ ಠಾಣೆಯಲ್ಲಿ ಅಪಹರಣ ದೂರು ದಾಖಲಿಸಿದ್ದರು.
ಹಾಗೆಯೇ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್ ರೇವಣ್ಣ ಮತ್ತು ಹೆಚ್ ರೇವಣ್ಣ ವಿರುದ್ಧ ಮತ್ತೋರ್ವ ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದರು. ಈ ನಡುವೆ, ಇಡೀ ಪೆನ್ ಡ್ರೈವ್ ಪ್ರಕರಣದ ತನಿಖೆಗೆ ವಿಶೇಷ ತನಿಖಾ ದಳವನ್ನು ಸರ್ಕಾರ ರಚನೆ ಮಾಡಿ ಆದೇಶಿಸಿತ್ತು. ಎರಡೂ ಪ್ರಕರಣಗಳಲ್ಲಿ ಹೆಚ್.ಡಿ.ರೇವಣ್ಣ ಅವರಿಗೆ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಇದೀಗ ಎರಡೂ ಪ್ರಕರಣಗಳಲ್ಲಿ ವಿಶೇಷ ನ್ಯಾಯಾಲಯ ಮಂಜೂರು ಮಾಡಿದ್ದ ಜಾಮೀನನ್ನು ರದ್ದು ಮಾಡುವಂತೆ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿದೆ.
ಈ ನಡುವೆ ಹೊಳೆನರಸೀಪುರ ಮತ್ತು ಕೆ.ಆರ್.ನಗರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಹೆಚ್.ಡಿ.ರೇವಣ್ಣ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಾಗಿದೆ.