ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದ್ದು, ಸದ್ಯ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಸೇರಿದ್ದಾರೆ. ವಿಡಿಯೋಗಳುಳ್ಳ ಪೆನ್ಡ್ರೈವ್ಗಳನ್ನು ಹಂಚಿಕೆ ಮಾಡಿದ ಆರೋಪ ಪ್ರಕರಣದಲ್ಲಿ ಹಾಸನದ ಮಾಜಿ ಶಾಸಕ ಪ್ರೀತಂಗೌಡ ವಿರುದ್ಧ ತನಿಖೆಗೆ ಹೈಕೋರ್ಟ್ ಅನುಮತಿ ನೀಡಿದೆ. ಆದರೆ ಬಂಧಿಸದಂತೆ ನಿರ್ಬಂಧ ವಿಧಿಸಿ ಆದೇಶಿಸಿದೆ.
ತಮ್ಮ ವಿರುದ್ಧದ ಪ್ರಕರಣ ರದ್ದುಕೋರಿ ಪ್ರೀತಂಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ನ್ಯಾಯಪೀಠ, ಈ ಪ್ರಕರಣ ಅತ್ಯಂತ ಗಂಭೀರ ಮತ್ತು ಸೂಕ್ಷ್ಮದ್ದಾಗಿದೆ. ಈ ನಿಟ್ಟಿನಲ್ಲಿ ತನಿಖೆ ನಡೆಯಬೇಕಾಗಿದೆ. ಆದ್ದರಿಂದ ತನಿಖೆಗೆ ಯಾವುದೇ ತಡೆ ನೀಡಲಾಗುವುದಿಲ್ಲ. ತನಿಖೆಗೆ ಪ್ರೀತಂಗೌಡ ಸಹಕರಿಸಬೇಕು ಆದರೆ ಬಂಧಿಸುವಂತಿಲ್ಲ. ಎಸ್ ಐಟಿ ಅಧಿಕಾರಿಗಳು ವಿಚಾರಣೆಗೆ ಮುಂದುವರೆಯಬಹುದಾಗಿದೆ ಎಂದು ತಿಳಿಸಿದೆ.
ಪೆನ್ಡ್ರೈವ್ ಹಂಚಿಕೆ ಆರೋಪ ಸಂಬಂಧ ಸಂತ್ರಸ್ತೆಯೊಬ್ಬರು ಸಿಐಡಿ ಸೈಬರ್ ಠಾಣೆಯಲ್ಲಿ ಪ್ರೀತಂಗೌಡ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಈ ಎಫ್ಐಆರ್ನಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಕಿರಣ್ ಮತ್ತು ಶರತ್ ಎಂಬುವರ ವಿರುದ್ಧವೂ ದೂರು ದಾಖಲಾಗಿದೆ.