ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಪೋಕ್ಸೊ ಪ್ರಕರಣ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತೆ ವಿಚಾರಣೆಗೆ ಹಾಜರಾಗುವಂತೆ ನಗರದ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಬಿಎಸ್ ಯಡಿಯೂರಪ್ಪ ಮತ್ತು ಇತರ ಮೂವರು ಆರೋಪಿಗಳಿಗೆ ಜುಲೈ 15ಕ್ಕೆ ವಿಚಾರಣೆಗೆ ಹಾಜರಾಗುವಂತೆ ನಗರದ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.
ಈ ಕುರಿತ ಅರ್ಜಿಯನ್ನು ನಗರದ 51ನೇ ಸಿವಿಲ್ ಮತ್ತು ಹೆಚ್ಚುವರಿ ಸೆಷನ್ಸ್ ಹಾಗೂ ಪೋಕ್ಸೊ ಪ್ರಕರಣಗಳ ವಿಚಾರಣೆ ನಡೆಸುವ ತ್ವರಿತಗತಿಯ ವಿಶೇಷ ನ್ಯಾಯಾಲಯ-1ರ ನ್ಯಾಯಾಧೀಶ ಎನ್.ಎಂ.ರಮೇಶ್ ಗುರುವಾರ ವಿಚಾರಣೆ ನಡೆಸಿ ಸಮನ್ಸ್ ಜಾರಿಗೊಳಿಸಲು ಆದೇಶಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯನ್ನು ಪರಿಗಣಿಸಿದ ನ್ಯಾಯಾಲಯ, ಬಿ.ಎಸ್.ಯಡಿಯೂರಪ್ಪ, ಅವರ ಸಹಚರರಾದ ವೈ.ಎಂ.ಅರುಣ್, ಎಂ.ರುದ್ರೇಶ್ ಮತ್ತು ವೈ.ಮರಿಸ್ವಾಮಿ ಅವರು ಜು.15 ರಂದು ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಆದೇಶಿಸಿದೆ.
ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯಿದೆ ಸೆಕ್ಷನ್ 8 (ಲೈಂಗಿಕ ದೌರ್ಜನ್ಯ) ಮತ್ತು ಐಪಿಸಿ ಸೆಕ್ಷನ್ 354 (ಎ) ಅಡಿ (ಲೈಂಗಿಕ ಕಿರುಕುಳ) ಎಫ್‌ಐಆರ್ ದಾಖಲಾಗಿದೆ.
17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಯಡಿಯೂರಪ್ಪರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮಾ.14ರಂದು ಪ್ರಕರಣ ದಾಖಲಾಗಿತ್ತು. ಫೆ.2 ರಂದು ಯಡಿಯೂರಪ್ಪರ ನಿವಾಸಕ್ಕೆ ಹೋಗಿದ್ದ ವೇಳೆ ಅವರು ತಮ್ಮ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆಯ ತಾಯಿ ದೂರು ಕೊಟ್ಟಿದ್ದರು.