ರಾಜ್ಯದ ಕರಾವಳಿ ಭಾಗದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಭಾರತೀಯ ಹವಾಮಾನ ಇಲಾಖೆ ನಾಳೆಯವರೆಗೂ ‘ರೆಡ್ ಅಲರ್ಟ್’ ವಿಸ್ತರಿಸಿದೆ.
ದಕ್ಷಿಣ ಒಳನಾಡಿನಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿದ್ದು, ”ರೆಡ್ ಅಲರ್ಟ್’ ಹಿಂತೆಗೆದುಕೊಂಡಿದೆ. ಆದರೆ ಜುಲೈ 20 ರವರೆಗೆ ಆರೆಂಜ್ ಆಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 19 ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ.
ಈ ಮಧ್ಯೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕಾರವಾರ ತಾಲೂಕಿನಲ್ಲಿ 6, ಕುಮಟಾ ತಾಲೂಕಿನಲ್ಲಿ 6, ಹೊನ್ನಾವರ ತಾಲೂಕಿನಲ್ಲಿ 14 ಸೇರಿದಂತೆ 26 ಚಿಕಿತ್ಸಾ ಕೇಂದ್ರಗಳನ್ನು ತೆರೆಯಲಾಗಿದ್ದು, 2,368 ಜನರಿಗೆ ಆಶ್ರಯ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾವಿನೂರು, ಕಾಗಿನೆರೆ ಸೇರಿದಂತೆ ಹಲವು ಗ್ರಾಮಗಳಲ್ಲಿ ಮಳೆಯಿಂದಾಗಿ ಇಂದಿಗೂ ವಿದ್ಯುತ್ ಇಲ್ಲದಂತಾಗಿದೆ. ಸಕಲೇಶಪುರ-ಮಾರನಹಳ್ಳಿ ನಡುವಿನ ರಾಷ್ಟ್ರೀಯ ಹೆದ್ದಾರಿ 75ಕ್ಕೆ ಹೆಚ್ಚು ಹಾನಿಯಾಗುತ್ತಿದೆ ಎಂದು ಸಕಲೇಶಪುರ ಉಪ ವಿಭಾಗಾಧಿಕಾರಿ ಶ್ರುತಿ ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಅನಾಹುತ ಸಂಭವಿಸಿದೆ. ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿದು ಒಂದೇ ಕುಟುಂಬದ ಐವರು ಸೇರಿ 7 ಮಂದಿ ಧಾರುಣವಾಗಿ ಸಾವನ್ನಪ್ಪಿದ್ದಾರೆ.