ದಕ್ಷಿಣ ಕನ್ನಡ ಜಿಲ್ಲೆಯ ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಫೀಸಾ ಸೇರಿದಂತೆ ರಾಜ್ಯದ ಒಟ್ಟು 6 ಮಂದಿ ಗ್ರಾಪಂ ಅಧ್ಯಕ್ಷರಿಗೆ ನವದೆಹಲಿಯ ಕೆಂಪುಕೋಟೆಯಲ್ಲಿ ಆ.15ರಂದು ನಡೆಯಲಿರುವ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ವಿಶೇಷ ಅತಿಥಿಗಳಾಗಿ ಭಾಗವಹಿಸಲು ಅವಕಾಶ ದೊರಕಿದೆ. ಇವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಅಭಿನಂದಿಸಿದ್ದಾರೆ.
ರಾಜ್ಯದ ಪ್ರತಿ ಗ್ರಾ.ಪಂ.ವ್ಯಾಪ್ತಿಯಲ್ಲೂ ಸ್ವಚ್ಛ ಸಂಕೀರ್ಣವನ್ನು ನಿರ್ಮಿಸಿ ವಾಹನದ ಮೂಲಕ ತ್ಯಾಜ್ಯ ಸಂಗ್ರಹಣಾ ಕಾರ್ಯ ಕಡ್ಡಾಯಗೊಳಿಸಲಾಗುತ್ತಿದ್ದು, ಪೆರುವಾಯಿಯಲ್ಲಿ ಸ್ವತಃ ವಾಹನ ಚಲಾಯಿಸುವ ಮೂಲಕ ನಫೀಸಾ ಗಮನ ಸೆಳೆದಿದ್ದರು.
• ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲುಕಿನ ಗೆದರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಕುಮಾರಿ ಲಕ್ಷ್ಮಿನರಸಮ್ಮ,
• ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಪೆರುವಾಯಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ನಫೀಸಾ,
• ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಕಮತನೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ರಾಜೇಶ್ವರಿ ಗುತ್ತಿ,
• ಕಲಬುರಗಿ ಜಿಲ್ಲೆಯ ತಾಜ್ ಸುಲ್ತಾನಪುರ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಶ್ರೀಮತಿ ಜಯಶ್ರೀ,
• ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಕಾನೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ದೇವಿ ಪಿ.ಟಿ
• ಚಾಮರಾಜನಗರ ತಾಲ್ಲೂಕಿನ ಅಟ್ಟಗುಳಿಪುರ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಶಿವಮ್ಮ
ಈ 6 ಮಂದಿ ನಾಳೆ ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಲಿರುವ ವಿಶೇಷ ಆಹ್ವಾನಿತರಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್ ನೇತೃತ್ವದಲ್ಲಿ ಈ ತಂಡ ಸಮಾರಂಭದಲ್ಲಿ ಪಾಲ್ಗೊಳ್ಳಲಿದೆ.
ಈ ಆರೂ ಮಂದಿ ಉತ್ತಮ ಆಡಳಿತ, ಪರಿಸರ ಕಾಳಜಿ, ನೈರ್ಮಲ್ಯ, ಘನತ್ಯಾಜ್ಯ ನಿರ್ವಹಣೆ, ತೆರಿಗೆ ಸಂಗ್ರಹಣೆ, ನೀರು ಸರಬರಾಜು ಮುಂತಾದ ಸಾಮಾಜಿಕ ಜವಾಬ್ದಾರಿಗಳನ್ನು ಅತ್ಯಂತ ಬದ್ಧತಾಪೂರ್ವಕವಾಗಿ ನಿರ್ವಹಿಸಿ ಈ ಗೌರವಕ್ಕೆ ಪಾತ್ರರಾಗಿರುವುದು ಕರ್ನಾಟಕಕ್ಕೆ ಹೆಮ್ಮೆ ತಂದಿದೆ ಎಂದೂ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.