ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಗೆ ರಾಜಾತಿಥ್ಯ ನೀಡಲಾಗುತ್ತಿದ್ದು, ಈ ಕುರಿತ ಸುದ್ದಿಯಾಗುತ್ತಿದ್ದಂತೆ ಪರಪ್ಪನ ಅಗ್ರಹಾರದ 7 ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಅವರು, ರಾಜ್ಯದ ಎಲ್ಲಾ ಜೈಲುಗಳಲ್ಲಿ ಸಿಸಿಟಿವಿ, ಜಾಮರ್ ಅಳವಡಿಸಲಾಗಿದೆ. ಹೀಗಿದ್ದರೂ ಇಂತಹ ಘಟನೆಗಳು ನಡೆಯುತ್ತವೆ ಎಂದಾದರೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಕೆಲಸ ಮಾಡಬೇಕಾಗಿದೆ. ಇಂತಹ ಘಟನೆಗಳಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಂಡು, ಇಂತಹ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು ಹೇಳಿದ್ದಾರೆ.
ಪ್ರಸ್ತುತದ ಬೆಳವಣಿಗೆ ಸಂಬಂಧ 7 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಜೈಲರ್ ಶರಣಬಸವ ಅಮೀನಗಡ, ಪ್ರಭು ಎಸ್ ಕಂದೇವಾಲ್, ತಿಪ್ಪೇಸ್ವಾಮಿ, ಶ್ರೀಕಾಂತ್, ವೆಂಕಪ್ಪ ಕೊರ್ತಿ, ಸಂಪತ್ ಕುಮಾರ್ ಕಡಪಟ್ಟಿ, ಬಸಪ್ಪ ತೇಲಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಹೇಳಿದ್ದಾರೆ.
ಘಟನೆ ಸಂಬಂಧ ವರದಿಯನ್ನು ಕೇಳಲಾಗಿದೆ. ಮೇಲಧಿಕಾರಿಗಳು ಈ ಪ್ರಕರಣದಲ್ಲಿ ನೇರವಾಗಿ ಭಾಗಿ ಆಗಿದ್ದರೆ ಅವರನ್ನೂ ಅಮಾನತು ಮಾಡಲಾಗುವುದು. ವರದಿ ಬಂದ ನಂತರ ಈ ಬಗ್ಗೆ ಕ್ರಮ ಕೈಗೊಳ್ಳುತ್ತೇವೆಂದು ತಿಳಿಸಿದರು.