ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶಿಸಿದೆ. ಕೋರ್ಟ್ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಂತೆ ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ SP ಉದೇಶ್ ನೇತೃತ್ವದಲ್ಲಿ ಎಫ್ಐಆರ್ ದಾಖಲಾಗಿದೆ. ಸಿಆರ್‌ಪಿಸಿ ಅಡಿಯಲ್ಲಿ ಎಫ್ಐಆರ್ ದಾಖಲಿಸಿ ಎಂದು ಕೋರ್ಟ್ ಆದೇಶ ನೀಡಿತ್ತು. ಅದೇ ಕಾಯ್ದೆಯಡಿ ಇದೀಗ ಸಿದ್ದರಾಮಯ್ಯ ವಿರುದ್ಧ ಸಿಆರ್‌ಪಿಸಿ 156(3)ರ ಹಲವು ಸೆಕ್ಷನ್ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ನಾಲ್ವರ ವಿರುದ್ಧ ಐಪಿಸಿ ಸೆಕ್ಷನ್ 120 ಬಿ, 166, 403, 420, 426, 465, 468, 340, 351 ಅಡಿ ಎಫ್ಐಆರ್ ದಾಖಲಾಗಿದೆ. ಹಾಗೇ ಕರ್ನಾಟಕ ಭೂಮಿ ಕಬಳಿಕೆ ನಿಷೇಧ ಕಾಯ್ದೆ 2011ರ ಅನ್ವಯ ಪ್ರಕರಣ ದಾಖಲಾಗಿದೆ.
ಭ್ರಷ್ಟಾಚಾರ ತಡೆ ಕಾಯ್ದೆ 1988 , ಬೇನಾಮಿ ಆಸ್ತಿ ವಹಿವಾಟು ಕಾಯ್ದೆ 1988, ಸೆಕ್ಷನ್ 120 ಬಿ ಕ್ರಿಮಿನಲ್ ಪಿತೂರಿ, ಸೆ, 166 ಸಾರ್ವಜನಿಕ ಸೇವಕ ಕಾನೂನು ಉಲ್ಲಂಘನೆ ಮಾಡುವುದು, ಸೆ 403 ಆಸ್ತಿಯ ದುರ್ಬಳಕೆ, ಸೆ 406 ನಂಬಿಕೆಯ ಉಲ್ಲಂಘನೆ, ಸೆ 420 ವಂಚನೆ, ಸೆ 426 ದುಷ್ಕೃತ್ಯವೆಸಗುವುದು, ಸೆ 465 ಪೋರ್ಜರಿ, ಸೆ 468 ವಂಚನೆ ಉದ್ದೇಶಕ್ಕಾಗಿ ದಾಖಲೆಗಳ ಪೋರ್ಜರಿ, ಸೆ 340 ಅಕ್ರಮ ಬಂಧನ, ಸೆ 351 ಇತರರಿಗೆ ಹಾನಿಯನ್ನುಂಟು ಮಾಡುವುದು.