ಬೆಂಗಳೂರಲ್ಲಿ ಭಾರೀ ಮಳೆ; ಶಾಲೆಗಳಿಗೆ ನಾಳೆ ರಜೆ ಘೋಷಣೆ

Most read

ಭಾರೀ ಮಳೆ ಹಿನ್ನೆಲೆಯಲ್ಲಿ ಬೆಂಗಳೂರಿನ ಶಾಲಾ ಕಾಲೇಜುಗಳ ಕುರಿತು ಮಹತ್ವದ ಆದೇಶ ಹೊರಡಿಸಲಾಗಿದೆ. ಬೆಂಗಳೂರಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವ ಕುರಿತು ಡಿಸಿ ಜಗದೀಶ್ ಅವರು ಮಾಹಿತಿ ನೀಡಿದ್ದಾರೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಭಾರೀ ಮಳೆಯ ಕಾರಣ ಖಾಸಗಿ ಹಾಗೂ ಸರ್ಕಾರಿ ಎರಡೂ ಶಾಲೆಗಳಿಗೆ ರಜೆ ನೀಡಲು ನಿರ್ಧಾರ ಮಾಡಲಾಗಿದೆ. ಆದರೆ ಪದವಿ, ಸ್ನಾತಕೋತ್ತರ, ಡಿಪ್ಲೊಮಾ, ಇಂಜಿನಿಯರಿಂಗ್, ಐಟಿಐ ಕಾಲೇಜಿಗೆ ರಜೆ ಇರುವುದಿಲ್ಲ ಎಂದು ತಿಳಿಸಿದೆ‌.

ಈ ಕುರಿತು ಅಧಿಕೃತ ಜ್ಞಾಪನ ಹೊರಡಿಸಿರುವ ಡಿಸಿ, ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ:16:10,2024 ಮತ್ತು 17-10- 2024ರಂದು ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:16.10.2024 ರಂದು ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ/ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಿ ಆದೇಶಿಸಿದೆ ಎಂದು ತಿಳಿಸಿದ್ದಾರೆ.

ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಈ ಕೆಳಕಂಡ ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದೆ.

  1. ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂಧರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು.
  2. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ, ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.
  3. ಈಗ ಮಳೆಗಾಗಿ, ಮುಂಜಾಗರೂಕತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಲಾಗಿದೆ.
  4. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು.
  5. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು.
  6. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡುವುದು.
    ಈ ಅಂಶಗಳನ್ನು ಕುರಿತು ಎಚ್ಚರ ವಹಿಸಬೇಕು ಎಂದೂ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

More articles

Latest article