ಭಾರಿ ಮಳೆ: ಬೆಂಗಳೂರು ನಗರ ವ್ಯಾಪ್ತಿಯ ಶಾಲೆಗಳಿಗೆ ಸೋಮವಾರ ರಜೆ

Most read

ಬೆಂಗಳೂರು ನಗರ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಸೋಮವಾರವೂ ವರುಣ ಅಬ್ಬರ ಜೋರಾಗಿದೆ. ಮಳೆ ಹಾನಿ ಹಾಗೂ ಅಪಾಯದ ಮುನ್ಸೂಚನೆಯನ್ನು ಗಮನದಲ್ಲಿ ಇರಿಸಿಕೊಂಡು ಸೋಮವಾರ (ಅಕ್ಟೋಬರ್ 21 ರಂದು) ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ/ ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ ಜಿ ಅವರು ಮೌಖಿಕ ಆದೇಶ ಹೊರಡಿಸಿದ್ದಾರೆ.

ಈ ಘೋಷಣೆಯು ಅಂಗನವಾಡಿ ಮತ್ತು ಶಾಲೆಗಳಿಗೆ ಮಾತ್ರ ಅನ್ವಯವಾಗುತ್ತಿದ್ದು, ಉಳಿದಂತೆ ಎಲ್ಲ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಎಂಜಿನಿಯರಿಂಗ್, ಐಟಿಐಗಳಿಗೆ ರಜೆ ಘೋಷಣೆ ಮಾಡಿಲ್ಲ.

ಮಳೆ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ರಜೆಯನ್ನು ನೀಡುವುದರಿಂದ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ಜಿಲ್ಲಾಧಿಕಾರಿ ಹೇಳಿದ್ದಾರೆ.

More articles

Latest article