ನವದೆಹಲಿ: ಬ್ರಿಟಿಷರ ವಿರುದ್ಧದ ಸಮರದಲ್ಲಿ ಐತಿಹಾಸಿಕ ವಿಜಯ ಸಾಧಿಸಿದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಗೌರವಾರ್ಥ ಅಂಚೆ ಚೀಟಿ ಬಿಡುಗಡೆಗೆ ಕೇಂದ್ರ ಸರ್ಕಾರ ಮುಂದಾಗಿದೆ.
ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಸಮರ ಸಾರಿ ಮೊದಲ ಗೆಲುವು ಸಾಧಿಸಿದ ದಿನ ಅಕ್ಟೋಬರ್ 23. ಈ ಐತಿಹಾಸಿಕ ವಿಜಯಕ್ಕೀಗ 200 ವರ್ಷ ಸಂದಲಿದ್ದು, ಇದರ ಜ್ಞಾಪಕಾರ್ಥವಾಗಿ ಕೇಂದ್ರ ಸರ್ಕಾರ ಚೆನ್ನಮ್ಮ ಹೆಸರಿನಲ್ಲಿ ಅಂಚೆ ಚೀಟಿ ಬಿಡುಗಡೆ ಮಾಡುತ್ತಿದೆ.
ಕೇಂದ್ರ ಸರ್ಕಾರ ಇದೇ ಅ.23ರಂದು ಕಿತ್ತೂರು ರಾಣಿ ಚೆನ್ನಮ್ಮ ಅಂಚೆ ಚೀಟಿ ಬಿಡುಗಡೆ ಮಾಡಲಿದ್ದು, ಈ ಮೂಲಕ ರಾಣಿ ಚೆನ್ನಮ್ಮ ಮತ್ತು ಕನ್ನಡ ನಾಡಿಗೆ ಅಭೂತಪೂರ್ವ ಗೌರವ ಸಲ್ಲಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಇತ್ತೀಚೆಗೆ ಕಿತ್ತೂರು ಕರ್ನಾಟಕ ಭಾಗದ ಪ್ರಮುಖರು ನಾಲ್ಕೈದು ದಿನಗಳ ಹಿಂದೆಯಷ್ಟೇ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಅವರನ್ನು ಭೇಟಿ ಮಾಡಿ ಅಂಚೆ ಚೀಟಿ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ್ದರು.
ಮನವಿ ಪುರಸ್ಕರಿಸಿದ ಕೇಂದ್ರ ಸರ್ಕಾರ ಕಿತ್ತೂರು ರಾಣಿ ಚೆನ್ನಮ್ಮ ಅಂಚೆ ಚೀಟಿ ಬಿಡುಗಡೆಗೆ ತ್ವರಿತ ನಿರ್ಣಯ ಕೈಗೊಂಡಿದ್ದು, ಬ್ರಿಟಿಷ್ ವಿರುದ್ಧ ಮೊದಲ ಗೆಲುವು ಸಾಧಿಸಿದ ಐತಿಹಾಸಿಕ ದಿನದಂದೇ ಬಿಡುಗಡೆಗೊಳಿಸಲು ಕ್ರಮ ಕೈಗೊಂಡಿದೆ ಎಂದು ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ.