ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಲವು ಕಡೆ ಜಲಾವೃತವಾಗಿದೆ. ಸೋಮವಾರ ತಡ ರಾತ್ರಿ ಬಂದ ಗುಡುಗು ಸಹಿತ ಮಳೆಗೆ ತಗ್ಗು ಪ್ರದೇಶಗಳು, ರಸ್ತೆಗಳು ನೀರಿನಲ್ಲಿ ಸಂಪೂರ್ಣ ಮುಳುಗಿಹೋಗಿದ್ದು, ಜನ ಜೀವನ ಅಸ್ತವ್ಯಸ್ಥಗೊಂಡಿದೆ.
ಈಗಾಗಲೇ ಬಂದ ಮಳೆಯಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಕರ್ನಾಟಕದ ಮೇಲೂ ಭಾರಿ ಪರಿಣಾಮ ಬೀಳುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕಳೆದ ಒಂದು ವಾರದಿಂದ ರಾಜಧಾನಿ ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಅಕ್ಟೋಬರ್ 28ರವರೆಗೂ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ನಲ್ಲೂ ಮಳೆಯಾಗಲಿದೆ.