ಬೆಂಗಳೂರು: ಮೈಸೂರು ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಮನವಿ ಮಾಡಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನವೆಂಬರ್ 26ಕ್ಕೆ ಮುಂದೂಡಿದೆ. ಈ ಪ್ರಕರಣದಲ್ಲಿ ಸಿಬಿಐ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಲು ಆದೇಶಿಸಲಾಗಿದೆ.
ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ನಾಗಪ್ರಸನ್ನ ಅವರ ಏಕ ಸದಸ್ಯ ಪೀಠದಲ್ಲಿ ಇಂದು ವಿಚಾರಣೆ ನಡೆಯಿತು. ಸ್ನೇಹಮಯಿ ಕೃಷ್ಣ ಪರ ವಾದ ಮಂಡಿಸಿದ ಹಿರಿಯ ವಕೀಲ ಕೆಜಿ ರಾಘವನ್, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿದ್ದೇವೆ ಎಂದರು. ಈ ವೇಳೆ ಲೋಕಾಯುಕ್ತ ಪೊಲೀಸರು ತನಿಖೆ ಮಾಡುತ್ತಿಲ್ಲವೇ ಎಂದು ನ್ಯಾ. ನಾಗಪ್ರಸನ್ನ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ರಾಘವನ್, ಲೋಕಾಯುಕ್ತ ತನಿಖೆಯನ್ನು ನಂಬುವಂತಿಲ್ಲ. ಈ ಪ್ರಕರಣದ ಫಲಿತಾಂಶ ಏನೇ ಬಂದರೂ ಸಾರ್ವಜನಿಕರ ವಿಶ್ವಾಸವನ್ನು ಉಳಿಸಿಕೊಂಡು ತನಿಖೆ ನಡೆಸುವ ಅಗತ್ಯವಿದೆ. ಆದ್ದರಿಂದ ಸಾರ್ವಜನಿಕರ ನಂಬಿಕೆ ಉಳಿಯುವಂತೆ ಮಾಡಲು ಸಿಬಿಐಗೆ ವಹಿಸಲು ಆದೇಶ ನೀಡಬೇಕು ಎಂದು ಕೋರಿದರು.
ಈ ನಡುವೆ ರಾಜ್ಯ ಅಭಿಯೋಜಕ ಜಗದೀಶ್ ಎರಡು ವಾರ ಕಾಲಾವಕಾಶ ಕೋರಿದರು. ಈ ಹಿನ್ನೆಲೆಯಲ್ಲಿ ವಿಚಾರಣೆಯನ್ನು ನ್ಯಾಯಮೂರ್ತಿಗಳು ನ. 26ಕ್ಕೆ ಮುಂದೂಡಿದರು. ಹಾಗೆಯೇ ನವೆಂಬರ್ 25ರವರೆಗೆ ನಡೆದಿರುವ ತನಿಖೆ ವಿವರ ಒದಗಿಸಲು ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿದರು.
ಸಿಬಿಐ ಪರ ಪಿ. ಪ್ರಸನ್ನಕುಮಾರ್, ರಾಜ್ಯ ಸರ್ಕಾರದ ಪರವಾಗಿ ರಾಜ್ಯದ ಹೆಚ್ಚುವರಿ ಪ್ರಾಸಿಕ್ಯೂಟರ್ ಜಗದೀಶ್ ಕುಮಾರ್ ನೋಟಿಸ್ ಪಡೆದುಕೊಂಡರು. ಪ್ರಕರಣದ ಮೊದಲ ಆರೋಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊರತುಪಡಿಸಿ ಉಳಿದೆಲ್ಲಾ ಆರೋಪಿಗಳಿಗೆ ತುರ್ತು ನೋಟಿಸ್ ನೀಡುವಂತೆ ನ್ಯಾಯಮೂರ್ತಿಗಳು ಆದೇಶಿಸಿದರು.