ಕರ್ನಾಟಕದ 3 ಕ್ಷೇತ್ರಗಳಲ್ಲಿ ಉಪ ಚುನಾವಣೆಗೆ ಅಬ್ಬರದ ಪ್ರಚಾರ ನಡೆಯುತ್ತಿದೆ. ನವೆಂಬರ್ 13ರ ಬುಧವಾರ ಮತದಾನ ನಡೆಯಲಿದೆ. ಸಂಡೂರು ಉಪ ಚುನಾವಣೆಯ ಹಿನ್ನಲೆಯಲ್ಲಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ, ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶವನ್ನು ಹೊರಡಿಸಿದ್ದಾರೆ.
ನವೆಂಬರ್ 11ರ ಸಂಜೆ 6 ಗಂಟೆಯಿಂದ ನವೆಂಬರ್ 14ರ ಸಂಜೆ 6 ಗಂಟೆಯವರೆಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023ರ ಕಲಂ 163 ರಡಿ ಹಾಗೂ ಇತರೆ ಜಾರಿಯಲ್ಲಿರುವ ಕಾನೂನು ಅನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ ವಿವಿಧ ಷರತ್ತುಗಳನ್ನು ವಿಧಿಸಿ ಆದೇಶಿಸಿದ್ದಾರೆ.
ಸಂಡೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಾತ್ರ ಈ ಪ್ರತಿಬಂಧಕಾಜ್ಞೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ನಡೆಸುವುದು ನಿಷೇಧಿಸಿದೆ. ಮತದಾನ ಮುಕ್ತಾಯವಾಗುವವರೆಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರದಂತೆ ಮನೆ ಮನೆ ಪ್ರಚಾರ ನಡೆಸಬಹುದು.
ಉಪ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿ ಅಥವಾ ಬೆಂಬಲಿಗರು ಸೇರಿ 5 ಜನರಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ. ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ನಿರ್ಬಂಧಿಸಲಾಗಿದೆ.
ಮತಗಟ್ಟೆ ಕೇಂದ್ರಗಳ 100 ಮೀಟರ್ ವ್ಯಾಪ್ತಿಯ ಒಳಗೆ ಚುನಾವಣೆ ಪ್ರಚಾರ ಮಾಡುವಂತಿಲ್ಲ. ಈ ಪ್ರದೇಶದ ವ್ಯಾಪ್ತಿಯಲ್ಲಿರುವ ಝೆರಾಕ್ಸ್ ಅಂಗಡಿ, ಬುಕ್‌ಸ್ಟಾಲ್, ಸೈಬರ್ ಕೆಫೆಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ.
ಮನುಷ್ಯ ರೂಪದ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ ಮತ್ತು ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ. ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲೀ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವಂತಿಲ್ಲ ಎಂದು ಆದೇಶಿಸಿದ್ದಾರೆ.