ಮೂರು ಕ್ಷೇತ್ರಗಳ ಮಿನಿ ಸಮರ; ಮತದಾನ ಆರಂಭ; ಮೂರೂ ಪಕ್ಷಗಳ ಅಭ್ಯರ್ಥಿಗಳ ಹಣೆಬರಹ ನಿರ್ಧಾರ

Most read

ಬೆಂಗಳೂರು: ಮಿನಿ ಸಮರ ಎಂದೇ ಪರಿಗಣಿಸಿರುವ ರಾಜ್ಯದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳ ಉಪ ಚುನಾವಣೆಗೆ ಮತದಾನ ಆರಂಭವಾಗಿದೆ. ಈ ಮೂರೂ ಕ್ಷೇತ್ರಗಳ ಉಪ ಚುನಾವಣೆಯನ್ನು ಆಡಳಿತಾರೂಢ ಕಾಂಗ್ರೆಸ್, ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಪ್ರತಿಷ್ಠೆಯಾಗಿ ಪರಿಗಣಿಸಿದ್ದವು.


ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಮೂರು ಪಕ್ಷಗಳ ನಾಯಕರು ಅಬ್ಬರದ ಪ್ರಚಾರ ನಡೆಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಕೇಂದ್ರ ಸಚಿವ ಎಚ್.ಡಿ. ಕುಮಾರ ಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್. ಅಶೋಕ್, ಬಿ.ಎಸ್.ಯಡಿಯೂರಪ್ಪ ಮತ್ತು ಇಡೀ ರಾಜ್ಯ ಸಚಿವ ಸಂಪುಟದ ಸದಸ್ಯರು ಪ್ರಚಾರದಲ್ಲಿ ಭಾಗಿಯಾಗಿದ್ದರು.
ಚನ್ನಪಟ್ಟಣದಲ್ಲಿ ಎನ್ಡಿಎ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್ನಿಂದ ಸಿ. ಪಿ. ಯೋಗೇಶ್ವರ್ ಸೇರಿದಂತೆ 31 ಮಂದಿ ಕಣದಲ್ಲಿದ್ದಾರೆ. ಶಿಗ್ಗಾಂವಿಯಲ್ಲಿ ಬಿಜೆಪಿಯಿಂದ ಭರತ್ ಬೊಮ್ಮಾಯಿ, ಕಾಂಗ್ರೆಸ್ನಿಂದ ಪಠಾಣ್ ಯಾಸೀರ್ ಅಹ್ಮದ್ ಖಾನ್ ಸೇರಿದಂತೆ 8 ಅಭ್ಯರ್ಥಿಗಳಿದ್ದಾರೆ. ಸಂಡೂರಲ್ಲಿ ಕಾಂಗ್ರೆಸ್ ನ ಇ. ಅನ್ನಪೂರ್ಣ, ಬಿಜೆಪಿಯಿಂದ ಬಂಗಾರು ಹನುಮಂತ ಸೇರಿ 6 ಹುರಿಯಾಳುಗಳು ಕಣದಲ್ಲಿದ್ದಾರೆ.


ಸಂಡೂರು ಕ್ಷೇತ್ರದಲ್ಲಿ 1,18,279 ಮಹಿಳಾ 1,17,739 ಪುರುಷ ಸೇರಿ ಒಟ್ಟು 2,36,047 ಮತದಾರರಿದ್ದಾರೆ. ಚನ್ನಪಟ್ಟಣ ಕ್ಷೇತ್ರದಲ್ಲಿ 2,32,949 ಮತದಾರರಿದ್ದು 1,20,617 ಮಹಿಳಾ ಮತ್ತು 1,12,324 ಪುರುಷ ಮತದಾರರಿದ್ದಾರೆ.


ಶಿಗ್ಗಾಂವಿ ಕ್ಷೇತ್ರದಲ್ಲಿ 1,16,076 ಮಹಿಳಾ, 1,21,443 ಪುರುಷ ಸೇರಿ ಒಟ್ಟು 2,37,525 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.
ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿರುವ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಇನ್ನಿಲ್ಲದ ಕಸರತ್ತುಗಳಲ್ಲಿ ತೊಡಗಿಸಿಕೊಂಡಿದ್ದರು.


ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗೆ ಚುನಾವಣಾ ಆಯೋಗ ಸಕಲ ಸಿದ್ದತೆಗಳನ್ನು ಮಾಡಿದೆ. ಯಾವುದೇ ಕ್ಷೇತ್ರದಲ್ಲಿ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಮೂರೂ ಕ್ಷೇತ್ರಗಳಲ್ಲಿ ಬಿಗಿ ಭದ್ರತೆ ವಹಿಸಲಾಗಿದೆ. ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.


ಶಿಗ್ಗಾಂವಿಯಲ್ಲಿ ಒಟ್ಟು 241 ಮತಗಟ್ಟೆ ಸ್ಥಾಪನೆ ಮಾಡಲಾಗಿದ್ದು, ಮತದಾನಕ್ಕೆ 1060 ಸಿಬ್ಬಂದಿ ಹಾಗೂ ಭದ್ರತೆಗಾಗಿ 716 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಚನ್ನಪಟ್ಟಣದಲ್ಲಿ 276 ಮತಗಟ್ಟೆ ಸ್ಥಾಪಿಸಲಾಗಿದ್ದು, ಚುನಾವಣೆಗೆ 1252 ಮತಗಟ್ಟೆ ಸಿಬ್ಬಂದಿ ಹಾಗೂ ಭದ್ರತೆಗೆ 650ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ವಿವಿಧ ಮತಗಟ್ಟೆಗಳಿಗೆ ಜಿಲ್ಲಾಧಿಕಾರಿಗಳು, ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


ಮೂರೂ ಕ್ಷೇತ್ರಗಳಲ್ಲಿ ಮತದಾರರು ಹುರುಪಿನಿಂದ ಮತದಾನಕ್ಕೆ ಆಗಮಿಸುತ್ತಿದ್ದಾರೆ. ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ. ಸಂಡೂರು ಮತಗಟ್ಟೆ 67ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರ ಪತಿ ಇ.ತುಕಾರಾಂ, ಪುತ್ರ ರಘುನಂದನ್, ಪುತ್ರಿ ಚೈತನ್ಯ ಮತ ಚಲಾಯಿಸಿದ್ದಾರೆ.

More articles

Latest article