ಬೆಂಗಳೂರು: ಗೃಹಿಣಿಯೊಬ್ಬರು ಅನುಮಾನಾಸ್ಪಾದವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ 36 ವರ್ಷದ ದೀಪಾ ಮೃತಪಟ್ಟ ಗೃಹಿಣಿ. ಈಕೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಪತಿ ಸುರೇಶ್ ಕಾರ್ಪೆಂಟರ್ ಕೆಲಸ ಮಾಡುತ್ತಿದ್ದರು. ಸರಿಯಾಗಿ ಕೆಲಸ ಮಾಡದ ಸುರೇಶ್ ಬ್ಯಾಂಕ್ ಹಾಗೂ ಖಾಸಗಿ ಲೇವಾದೇವಿಗಾರರಿಂದ ಭಾರಿ ಮೊತ್ತದ ಸಾಲ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ.
ಆರ್ಥಿಕ ಸಮಸ್ಯೆಯಿಂದ ಸಾಲ ತೀರಿಸಲು ಸಾಧ್ಯವಾಗಿರಲಿಲ್ಲ. ಇದೇ ವಿಚಾರಕ್ಕೆ ದಂಪತಿ ನಡುವೆ ಪದೇ ಪದೇ ಕಲಹ ನಡೆಯುತ್ತಿತ್ತು. ಸೋಮವಾರ ಮಧ್ಯಾಹ್ನವೂ ದಂಪತಿ ಮಧ್ಯೆ ಜೋರು ಗಲಾಟೆ ನಡೆದಿತ್ತು ಎಂದು ನೆರೆಹೊರೆಯವರು ತಿಳಿಸಿದ್ದಾರೆ. ಜಗಳ ನಡೆದ ನಂತರ ಕೆಲವೇ ಕ್ಷಣಗಳಲ್ಲಿ ಗೃಹಿಣಿ ಮೃತದೇಹ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎನ್ನುವುದು ಕಂಡು ಬಂದಿದೆ. ತನಿಖೆ ಬಳಿಕ ಗೃಹಿಣಿಯ ಸಾವಿಗೆ ನಿಖರ ಕಾರಣ ಗೊತ್ತಾಗಲಿದೆ ಎಂದು ಪೊಲೀಸರು ಹೇಳಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.