ಗ್ಯಾರಂಟಿ, ಸರ್ಕಾರದ ಅಭಿವೃದ್ಧಿ ಕೆಲಸಗಳಿಗೆ ಜನ ಮನ್ನಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Most read

ಬೆಂಗಳೂರು: ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ-ಸವಣೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹರ್ಷ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರು, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಸಾರಥ್ಯದ ರಾಜ್ಯ ಸರ್ಕಾರಕ್ಕೆ ಸಿಕ್ಕ ಗೆಲುವು ಇದಾಗಿದೆ. ಪಂಚ ಗ್ಯಾರಂಟಿ ಯೋಜನೆಗಳನ್ನು ಜನ ಮೆಚ್ಚಿದ್ದಾರೆ ಎಂದು ಈ ಫಲಿತಾಂಶ ತೋರುತ್ತದೆ ಎಂದು ಸಚಿವರು ಹೇಳಿದ್ದಾರೆ. ಉಪಚುನಾವಣೆ ಫಲಿತಾಂಶದ ಮೂಲಕ ಮೂರು ಕ್ಷೇತ್ರಗಳ ಮತದಾರರು ವಿಪಕ್ಷಗಳಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ. ಮೂರು ಕ್ಷೇತ್ರಗಳ ಮತದಾರರು ಅಭಿವೃದ್ಧಿ ಕಾರ್ಯಗಳಿಗೆ ಮತ ಹಾಕಿದ್ದು, ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದ ವಿರೋಧ ಪಕ್ಷಗಳಿಗೆ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದಿದ್ದಾರೆ.

ಉಪ ಚುನಾವಣಾ ಫಲಿತಾಂಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕೈ ಮತ್ತಷ್ಟು ಬಲಗೊಂಡಿದ್ದು, ಈ ಫಲಿತಾಂಶದಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ಬಲಗೊಂಡಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

More articles

Latest article