ಶೀಘ್ರವೇ ಗೃಹಲಕ್ಷ್ಮೀ ಸಂಘಗಳ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Most read

 ಕನಕಪುರ: ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸ್ತ್ರೀಯರ ಹಾಗೂ ಸ್ತ್ರೀ ಶಕ್ತಿ ಸಂಘಗಳ ಪಾತ್ರ ಬಹಳ ದೊಡ್ಡದಿದೆ. ಈ ಹಿನ್ನೆಲೆಯಲ್ಲಿ ಗೃಹಲಕ್ಷ್ಮೀ ಸಂಘಗಳನ್ನು ಸ್ಥಾಪಿಸುವ ಮಹತ್ವಾಕಾಂಕ್ಷೆಯನ್ನು ಹೊಂದಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಇಲ್ಲಿನ ಕನಕಾಂಬರಿ ಮಹಿಳಾ ಒಕ್ಕೂಟದ ವತಿಯಿಂದ ರೂರಲ್ ಕಾಲೇಜು ಮೈದಾನದಲ್ಲಿ ಭಾನುವಾರ ನಡೆದ ಮಹಿಳಾ‌ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ಮಹಿಳಾ ಪರ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಈ ಹಿಂದೆ ಎಸ್. ಎಂ.ಕೃಷ್ಣ ಅವಧಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಮೋಟಮ್ಮ ಅವರು ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳನ್ನು ಆರಂಭಿಸಿ, ಆರ್ಥಿಕ ಶಕ್ತಿಯನ್ನು ತುಂಬಿದರು‌. ಇದೀಗ ಅದೇ ಇಲಾಖೆಯ ಮೂಲಕ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿರುವುದು ನನ್ನ ಪಾಲಿನ ಅದೃಷ್ಟ ಎಂದರು.  ಗೃಹಲಕ್ಷ್ಮೀ ಯೋಜನೆಯ ಮೂಲಕ ಮಹಿಳೆಯರನ್ನು ಸ್ವಾವಲಂಬಿಯನ್ನಾಗಿಸುವ ಉದ್ದೇಶ ನನ್ನದು. ಹಾಗಾಗಿ ಗೃಹಲಕ್ಷ್ಮೀ ಸಂಘಗಳ ಮೂಲಕ ಮಹಿಳೆಯರಿಗೆ ಮತ್ತಷ್ಟು ಶಕ್ತಿ ತುಂಬಲಾಗುವುದು ಎಂದು ತಿಳಿಸಿದರು.

ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನರಿಗೆ ಅನುಕೂಲಕರ ಮಾಡುವ ಸಲುವಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಯಿತು. ಇದರ ಫಲವಾಗಿ ಇಂದು 1.24 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಂದಾಯ ಆಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ‌ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಟಿಯ ಫಲವಾಗಿ ಇಂದು ಕರ್ನಾಟಕದಲ್ಲಿ ಮಹಿಳೆಯರ ಸಬಲೀಕರಣ ಮಾಡಲಾಗುತ್ತಿದೆ. ಕನಕಪುರ ತಾಲೂಕಿನಲ್ಲಿ 70  ಸಾವಿರ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಂದಾಯ ಆಗುತ್ತಿದೆ ಎಂದರು.

 ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿ ಶಿವಕುಮಾರ್ ಕೇವಲ ಕರ್ನಾಟಕದ ನಾಯಕ ಅಲ್ಲ, ಅವರು ರಾಷ್ಟ ಮಟ್ಟದ ನಾಯಕ. ಅಭಿವೃದ್ಧಿಗೆ ಮತ್ತೊಂದು ಹೆಸರೇ ಡಿ.ಕೆ.ಶಿವಕುಮಾರ್. ಬೆಂಗಳೂರು ಮಾದರಿಯಲ್ಲಿ ಕನಕಪುರ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಿದ್ದಾರೆ. ಕೋವಿಡ್ ಸಮಯದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಅವರು, ಕಷ್ಟದ ಕಾಲದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿ, 136 ಜನ ಶಾಸಕರು ಆಯ್ಕೆಯಾಗಲು ತುಂಬಾ ಶ್ರಮ ಪಟ್ಟಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇರಲು ಡಿ.ಕೆ.ಶಿವಕುಮಾರ್ ಅವರ ಪಾತ್ರ ದೊಡ್ಡದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

More articles

Latest article