ಜಾತಿ ನಿಂದನೆ ಪ್ರಕರಣ: ಎಫ್‌ ಎಸ್‌ ಎಲ್‌ ಪರೀಕ್ಷೆಯಲ್ಲಿ ಬಿಜೆಪಿ ಶಾಸಕ ಮುನಿರತ್ನಗೆ ಧ್ವನಿ ದೃಢ

Most read

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ
ದಾಖಲಾಗಿದ್ದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿ ವಿಜ್ಞಾನ
ಪ್ರಯೋಗಾಲಯಕ್ಕೆ (ಎಫ್‌ಎಸ್ಎಲ್) ಕಳುಹಿಸಿದ್ದ ಆಡಿಯೊ ಮಾದರಿ ವರದಿ ಬಂದಿದ್ದು, ಆಡಿಯೊದಲ್ಲಿ ಇರುವುದು ಮುನಿರತ್ನ ಅವರದ್ದೇ ಧ್ವನಿ ಎನ್ನುವುದು ದೃಢಪಟ್ಟಿದೆ.ಇದರಿಂದ ಮುನಿರತ್ನ ಅವರಿಗೆ ಸಂಕಷ್ಟೆದುರಾಗಿದ್ದು ಜಾತಿ ನಿಂದನೆ ಪ್ರಕರಣ ದೃಢಪಡುವ ಲಕ್ಷಣಗಳಿವೆ ಎಂದು ಹೇಳಲಾಗುತ್ತಿದೆ.

ಶಾಸಕರು ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಬಿಬಿಎಂಪಿ ಗುತ್ತಿಗೆದಾರ ವೇಲು ನಾಯ್ಕರ್ ವೈಯಾಲಿಕಾವಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಮುನಿರತ್ನ ವಿರುದ್ಧ ಸೆ.13 ರಂದು ಪೊಲೀಸರು  ಎಫ್‌ಐಆರ್ ದಾಖಲಿಸಿದ್ದರು. ಸೆ.14ರಂದು ಮುನಿರತ್ನ ಅವರನ್ನು ಕೋಲಾರದ ಸಮೀಪ ವೈಯಾಲಿಕಾವಲ್ ಠಾಣೆ ಪೊಲೀಸರು
ಬಂಧಿಸಿದ್ದರು. ಇದು ಮೊದಲ ಪ್ರಕರಣವಾಗಿದ್ದು, ಮುನಿರತ್ನ ವಿರುದ್ಧ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಅತ್ಯಾಚಾರ ಆರೋಪದಡಿಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿತ್ತು. ಎರಡೂ ಪ್ರಕರಣಗಳ ತನಿಖೆಯನ್ನು ಸರ್ಕಾರ ಎಸ್‌ಐಟಿಗೆ ವರ್ಗಾವಣೆ ಮಾಡಿತ್ತು. ದೂರುದಾರರು ನೀಡಿದ ಆಡಿಯೊ ಕ್ಲಿಪ್ ಅನ್ನು ಎಸ್‌ಐಟಿ ಪೊಲೀಸರು ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದರು. ಇದೀಗ ಅದರ ವರದಿ ಬಂದಿದ್ದು ಆಡಿಯೊದಲ್ಲಿ ಇರುವುದು ಮುನಿರತ್ನ ಅವರದ್ದೇ ಧ್ವನಿ ಎನ್ನುವುದು ದೃಢವಾಗಿದೆ ಎಂದು ಮೂಲಗಳು ತಿಳಿಸಿವೆ. ಅಶೋಕನಗರ ಠಾಣೆಯಲ್ಲಿ ವಿಚಾರಣೆ ನಡೆಯುತ್ತಿದ್ದಾಗಲೇ  ಎಫ್‌ಎಸ್ಎಲ್ ತಜ್ಞರು ಮುನಿರತ್ನ ಅವರ ಧ್ವನಿ ಮಾದರಿಯನ್ನು ಪರೀಕ್ಷೆಗಾಗಿ ಸಂಗ್ರಹಿಸಿದ್ದರು. ದೂರುದಾರ ವೇಲು ನಾಯ್ಕರ್‌ ಅವರ  ಧ್ವನಿ ಮಾದರಿಯನ್ನೂ ಸಂಗ್ರಹಿಸಲಾಗಿತ್ತು. ಪೊಲೀಸರು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದ್ದ ಆಡಿಯೋದ ಮೂಲ ತುಣುಕು ಹಾಗೂ ಆಡಿಯೋ ರೆಕಾರ್ಡ್ ಮಾಡಿದ್ದ ಸಾಧನವನ್ನು ವಶಕ್ಕೆ ಪಡೆದಿದ್ದಾರೆ. ಇದೀಗ ತಜ್ಞರ ವರದಿ ತನಿಖಾಧಿಕಾರಿಗಳ ಕೈ ಸೇರಿದೆ ಎಂದು ತಿಳಿದು ಬಂದಿದೆ.

More articles

Latest article