ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಪ್ರಮಾಣ ವಚನ; ಇಂಡಿಯಾ ಒಕ್ಕೂಟದ ನಾಯಕರು ಸಾಕ್ಷಿ

Most read

ರಾಂಚಿ: ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ನಾಯಕ ಹೇಮಂತ್ ಸೊರೇನ್, ಜಾರ್ಖಂಡ್ ರಾಜ್ಯದ 14ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ಸಂದರ್ಭಕ್ಕೆ ಇಂಡಿಯಾ ಬಣದ ಹಲವು ನಾಯಕರು ಸಾಕ್ಷಿಯಾದರು. 49 ವರ್ಷದ ಆದಿವಾಸಿ ನಾಯಕ ಸೊರೇನ್ ಅವರಿಗೆ ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಪ್ರತಿಜ್ಞಾ ವಿಧಿ ಬೋಧಿಸಿದರು. ರಾಂಚಿಯ ಮೊರಾಬಾದಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಎಎಪಿ ನಾಯಕ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಹಾಜರಿದ್ದರು.

ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಹೇಮಂತ್ ಸೊರೇನ್, ತಮ್ಮ ತಂದೆ, ಜೆಎಂಎಂ ಅಧ್ಯಕ್ಷ ಶಿಬು ಸೊರೇನ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಜಾರ್ಖಂಡ್ ಮುಖ್ಯಮಂತ್ರಿಯಾಗಿ 4ನೇ ಬಾರಿಗೆ ಹೇಮಂತ್ ಸೊರೇನ್ ಅಧಿಕಾರದ ಗದ್ದುಗೆ ಏರಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭೆ ಚುನಾವಣೆಯಲ್ಲಿ ಬರ್ಹೈತ್ ಕ್ಷೇತ್ರದಿಂದ ಬಿಜೆಪಿಯ ಗಮ್ಮಿಯೆಲ್ ಹೆಂಬ್ರೇಮ್ ಅವರನ್ನು 39,791 ಮತಗಳಿಂದ ಸೋಲಿಸಿ ಹೇಮಂತ್ ಮರು ಆಯ್ಕೆಯಾಗಿದ್ದರು. ಜಾರ್ಖಂಡ್ ವಿಧಾನಸಭೆಯ 81 ಕ್ಷೇತ್ರಗಳ ಪೈಕಿ ಜೆಎಂಎಂ ನೇತೃತ್ವದ ಮೈತ್ರಿಕೂಟವು 56 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ, ಎನ್‌ಡಿಎ 24 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು.

More articles

Latest article