ಮಾಧ್ಯಮಗಳ ಮುಂದಿನ ಚರ್ಚೆಯಿಂದ ರಾಜಕೀಯ ನಡೆಯುವುದಿಲ್ಲ: ಡಿಸಿಎಂ ಡಿ. ಕೆ. ಶಿವಕುಮಾರ್

Most read

ನವದೆಹಲಿ: ಮಾಧ್ಯಮಗಳ ಮುಂದೆ ಮಾಡುವ ಚರ್ಚೆಯಿಂದ ರಾಜಕಾರಣ ನಡೆಯುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ಕೆಪಿಸಿಸಿ ಅಧ್ಯಕ್ಷ ಗಾದಿಗೆ ನಾನೂ ಆಕಾಂಕ್ಷಿ ಎನ್ನುವ ಸಚಿವ ಕೆ.ಎನ್.ರಾಜಣ್ಣ ಹಾಗೂ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಕುರಿತು ಪ್ರಶ್ನಿಸಿದಾಗ, ಮಾಧ್ಯಮಗಳ ಮುಂದೆ ರಾಜಕೀಯ ಚರ್ಚೆ ಮಾಡುವುದು ಯಾವ ಪಕ್ಷದವರಿಗೂ ಹಾಗೂ ಯಾರಿಗೂ ಸೂಕ್ತವಾದುದಲ್ಲ ಎಂದು ಅಭಿಪ್ರಾಯಪಟ್ಟರು.

ಕಾಂಗ್ರೆಸ್ ಪಕ್ಷದ ಸಾಧನಾ ಸಮಾವೇಶವು ಸಿಎಂ ಸಿದ್ದರಾಮಯ್ಯ ಅವರ ವೈಯಕ್ತಿಕ ಸಮಾವೇಶವಾಗಿ ಬದಲಾಗಿದೆ ಎಂದು ಅಸಮಾಧಾನ ಹೊಂದಿರುವ ಕೆಲವರು ಎಐಸಿಸಿಗೆ ಪತ್ರ ಬರೆದಿರುವ ಬಗ್ಗೆ ಕೇಳಿದಾಗ, “ನನಗೆ ಇದರ ಬಗ್ಗೆ ಮಾಹಿತಿಯಿಲ್ಲ. ಆದರೆ, ಸಮಾವೇಶವನ್ನು ಯಾವ ಕಾರಣಕ್ಕೆ ಮಾಡಲಾಗುತ್ತಿದೆ ಎನ್ನುವುದರ ಬಗ್ಗೆ ಮುಖ್ಯಮಂತ್ರಿಗಳು ನನಗೆ ಮೊದಲೇ ತಿಳಿಸಿದ್ದಾರೆ. ಮಿಕ್ಕ ವಿಚಾರಗಳು ನನಗೆ ಗೊತ್ತಿಲ್ಲ. ಏಕೆಂದರೆ ಮುಖ್ಯಮಂತ್ರಿಗಳು ಹಾಗೂ ನಾನು ಭೇಟಿ ಮಾಡಿ ಮೂರು ನಾಲ್ಕು ದಿನಗಳಾಗಿವೆ ಎಂದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ಕುರಿತು ಪ್ರತಿಕ್ರಿಯಿಸಿದ ಡಿಕೆಶಿ  ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಅಧಿವೇಶನದಲ್ಲಿ ಪಕ್ಷದ ಅಧ್ಯಕ್ಷರಾಗಿ ಮಹಾತ್ಮಾ ಗಾಂಧಿಯವರು ಅಧಿಕಾರವಹಿಸಿಕೊಂಡು ನೂರು ವರ್ಷಗಳಾಗಿದೆ. ಈ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಲು ಅವರನ್ನು ಭೇಟಿಯಾಗಿದ್ದೆ ಎಂದು ತಿಳಿಸಿದರು.

ಡಿಸೆಂಬರ್ 28 ರಂದೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಾಗಿದ್ದು, ಮಲ್ಲಿಕಾರ್ಜುನ ಖರ್ಗೆ ಅವರ ಬಳಿ ಚರ್ಚೆ ಮಾಡಿದ್ದೇನೆ.  ಸುಮಾರು 300 ಕ್ಕೂ ಹೆಚ್ಚು ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ  ನಿರೀಕ್ಷೆ ಇದೆ. ಈ ಕಾರ್ಯಕ್ರಮ ಕರ್ನಾಟಕದಲ್ಲಿ ನಡೆಯಬೇಕು ಎನ್ನುವ ಅಭಿಲಾಷೆ ನಮ್ಮದಾಗಿದೆ. ಈ ಬಗ್ಗೆ ಪಕ್ಷದ ಕಾರ್ಯಕಾರಿ ಸಭೆಯಲ್ಲಿ ಚರ್ಚಿಸಿ ತಿಳಿಸುವುದಾಗಿ ಅವರು ಹೇಳಿದ್ದಾರೆ. ನಾನು ಮತ್ತು ಮುಖ್ಯಮಂತ್ರಿ ಇಬ್ಬರು ಒಟ್ಟಿಗೆ ಈ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದರು. ಸಂಪುಟ ವಿಸ್ತರಣೆಯ ಬಗ್ಗೆ ಕೇಳಿದಾಗ, ಸಂಪುಟ ವಿಸ್ತರಣೆಯ ಸಂದರ್ಭ ಬಂದಾಗ ಆಗುತ್ತದೆ. ಈಗ ಅಂತಹ ಸಂದರ್ಭ ಒದಗಿ ಬಂದಿಲ್ಲ. ಒಂದು ಸಚಿವ ಸ್ಥಾನ ಖಾಲಿ ಇದ್ದು ಅದನ್ನು ತುಂಬುವ ಬಗ್ಗೆ ಚರ್ಚೆ ನಡೆದಿಲ್ಲ ಎಂದು ತಿಳಿಸಿದರು.

ನೀರಾವರಿ ವಿಚಾರವಾಗಿ ಪ್ರಧಾನಿ ಮೋದಿ ಭೇಟಿ: ರಾಜ್ಯದ ವಿಚಾರಗಳು ಹಾಗೂ ಮುಖ್ಯವಾಗಿ ನೀರಾವರಿ ವಿಚಾರವಾಗಿ ಮನವಿಯನ್ನು ಸಲ್ಲಿಸಲು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲಾಗುತ್ತಿದೆ. ಗುರುವಾರದಂದು  ಕೇಂದ್ರ ಅರಣ್ಯ ಸಚಿವರಾದ ಭೂಪೇಂದರ್ ಯಾದವ್  ಹಾಗೂ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿ ಕಳಸಾ – ಬಂಡೂರಿ ವಿಚಾರವಾಗಿ ಪರಿಸರ ಇಲಾಖೆಯಿಂದ ಬಾಕಿ ಇರುವ ಅನುಮತಿ ಹಾಗೂ ಅಡೆತಡೆಗಳನ್ನು ನಿವಾರಿಸಬೇಕು ಎಂದು ಮನವಿ ಸಲ್ಲಿಸಿದ್ದೆವು. ಇದಕ್ಕೆ ಇಬ್ಬರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ವನ್ಯಜೀವಿ ಮಂಡಳಿಗೆ ಪ್ರಧಾನಿ ಅವರೇ ಅಧ್ಯಕ್ಷರಾಗಿರುವ ಕಾರಣಕ್ಕೆ ಅವರಿಗೂ ಮನವಿ ಸಲ್ಲಿಸಲಾಗುವುದು ಎಂದರು.

ರಾಂಚಿಯಲ್ಲಿ ನಡೆದ ಹೇಮಂತ್ ಸೋರೆನ್ ಅವರ ಮುಖ್ಯಮಂತ್ರಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಕ್ಷದ ಪರವಾಗಿ ರಾಹುಲ್ ಗಾಂಧಿ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ನಾನು ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು. ಇಂಡಿಯಾ ಒಕ್ಕೂಟದ ನಾಯಕರು ಭಾಗವಸಿ ಹೇಮಂತ್ ಅವರಿಗೆ ಶುಭ ಕೋರಿದೆವು ಎಂದು ಶಿವಕುಮಾರ್‌ ಅವರು ತಿಳಿಸಿದರು.

More articles

Latest article