ಬೆಂಗಳೂರು: ತಮಿಳುನಾಡಿನಲ್ಲಿ ಅಬ್ಬರಿಸುತ್ತಿರುವ ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದಲ್ಲೂ ತನ್ನ ಪ್ರಭಾವವನ್ನು ಮುಂದುವರೆಸಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಅವಾಂತರ ಸೃಷ್ಟಿಸಿದ್ದು, ಇಂದೂ ಸಹ ಹಲವಾರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಿರಂತರವಾಗಿ ಸುರಿಯುತ್ತಿಉವ ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ಅಲ್ಪ ಪ್ರಮಾಣದ ಭೂಕುಸಿತ ಉಂಟಾಗಿದ್ದು, ಸಂಚಾರದಲ್ಲಿ ವ್ಯತ್ಯಯವಾಗಿದೆ. ಆದರೆ ಯಾರಿಗೂ ತೊಂದರೆಯಾಗಿಲ್ಲ. ಮಾಗಡಿ ತಾಲೂಕಿನ ಮಂಚನಬೆಲೆ ಜಲಾಶಯದ ಸೇತುವೆಯಲ್ಲಿ ಬಿರುಕು ಬಿಟ್ಟಿದೆ. ತಿಂಗಳ ಹಿಂದೆ ಸುರಿದಿದ್ದ ಬಾರಿಮಳೆಗೆ ಒಂದು ಸೇತುವೆ ಕೊಚ್ಚಿ ಹೋಗಿತ್ತು. ಇದೀಗ ಎರಡನೇ ತಾತ್ಕಾಲಿಕ ಸೇತುವೆಯಲ್ಲೂ ಬಿರುಕು ಮೂಡಿದೆ.
ಅತ್ತ ಕರಾವಳಿಯ ಉಡುಪಿಯಲ್ಲಿ ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಲೇ ಇದೆ. ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವವರು ಮತ್ತು ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ. ಹವಾಮಾನ ಇಲಾಖೆ ಜಿಲ್ಲೆಯಲ್ಲಿ ಆರೇಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡಜಿಲ್ಲೆಯಲ್ಲೂ ಮಳೆ ಮುಂದುವರೆದಿದೆ. ಸೋಮವಾರ ನೇತ್ರಾವತಿ ನದಿಯಲ್ಲಿ ವ್ಯಕ್ತಿಯೊಬ್ಬ ಕೊಚ್ಚಿ ಹೋಗಿದ್ದಾನೆ ಎಂದು ತಿಳಿದು ಬಂದಿದೆ.
ಕೊಡಗಿನಲ್ಲೂ ಧಾರಾಕಾರ ಮಳೆಯಾಗಲಿದೆ. ಇತ್ತ ರಾಜಧಾನಿ ಬೆಂಗಳೂರು ಪ್ರದೇಶದಲ್ಲಿ ಚಂಡಮಾರುತದ ಅಬ್ಬರ ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆ. ಆದರೆ ತುಮಕೂರು, ರಾಮನಗರ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಮುನ್ಸೂಚನೆ ಇದೆ.
ಬೆಂಗಳೂರು ಹವಾಮಾನ ಕೇಂದ್ರದಲ್ಲಿ ಡಿಸೆಂಬರ್ 2ರ ಸೋಮವಾರ ಸಂಜೆಯವರಿಗೆ ದಾಖಲಾಗಿರುವ ವರದಿಯ ಪ್ರಕಾರ ಚಾಮರಾಜನಗರ ಜಿಲ್ಲೆಯಲ್ಲಿ ಗರಿಷ್ಠ ಮಳೆಯಾಗಿದೆ. ಇಲ್ಲಿ 5 ಸೆಂಟಿ ಮೀಟರ್ ಮಳೆಯಾಗಿದೆ. ಉಳಿದಂತೆ ಬಂಡೀಪುರದಲ್ಲಿ 4 ಸೆಂಟಿ ಮೀಟರ್, ಕೋಲಾರ ಜಿಲ್ಲೆಯ ರಾಯಲ್ಪಾಡು 4, ಕೊಡಗು ಜಿಲ್ಲೆಯ ಭಾಗಮಂಡಲ 3, ಮಲೆಮಹದೇಶ್ವರ ಬೆಟ್ಟ 3, ಮಂಡ್ಯ 3, ಬೆಂಗಳೂರು ನಗರ 3, ಮೈಸೂರು ಜಿಲ್ಲೆಯ ನಂಜನಗೂಡು 3, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ 3 ಸೆಂಮೀ ಮಳೆಯಾಗಿದೆ.