ಬೆಂಗಳೂರಿನ ವಿವಿಧ ಭಾಗಗಳಲ್ಲಿ ವ್ಹೀಲಿಂಗ್ ನಡೆಸುತ್ತಿದ್ದ ಪುಂಡರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದ ಸಂಚಾರ ವಿಭಾಗದ ಪೊಲೀಸರು ಒಂದೇ ದಿನದಲ್ಲಿ 11 ಮಂದಿಯನ್ನು ಬಂಧಿಸಿದ್ದಾರೆ. ಮೇಲ್ಸೇತುವೆ,ರಿಂಗ್ ರಸ್ತೆ ಮೊದಲಾದ ಬಡಾವಣೆಗಳಲ್ಲಿ ವ್ಹೀಲಿಂಗ್ ನಡೆಸುತ್ತಾ ಇತರೆ ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿರುವ ಬಗ್ಗೆ ಸಂಚಾರ ಪೊಲೀಸರಿಗೆ ಸಾಮಾಜಿಕ ಜಾಲತಾಣ ಹಾಗೂ ನೇರವಾಗಿ ದೂರುಗಳು ಬಂದಿದ್ದವು. ಈ ದೂರುಗಳನ್ನು ಆಧರಿಸಿ ಸಂಚಾರ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.
ಡಿಸೆಂಬರ್. 2ರ ಮುಂಜಾನೆಯಿಂದ ಡಿ.3ರ ಸಂಜೆವರೆಗೆ ನಗರದ ಎಲ್ಲಾ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ವ್ಹೀಲಿಂಗ್ ಮಾಡುತ್ತಿದ್ದ 11 ಮಂದಿಯನ್ನು ಬಂಧಿಸಿ, 10 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವರ ವಿರುದ್ಧ 12 ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಪೂರ್ವ ವಿಭಾಗದ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ 406 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಮತ್ತು ರೂ 2 ಲಕ್ಷ ದಂಡ ಸಂಗ್ರಹಿಸಲಾಗಿದೆ. ಏಕಮುಖ ಸಂಚಾರ, ನಿಷೇಧಿತ ಸ್ಥಳದಲ್ಲಿ ವಾಹನ ನಿಲುಗಡೆ, ದ್ವಿಚಕ್ರ ವಾಹನದಲ್ಲಿ ಮೂವರ ಸವಾರಿ ಸೇರಿದಂತೆ ವಿವಿಧ ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದ 406 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇವರಿಂದ ಎರಡು ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ.