ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಇನ್ನಿಲ್ಲ. ಅವರು ಬೆಂಗಳೂರಿನಲ್ಲಿ ಸೋಮವಾರ ಮಧ್ಯರಾತ್ರಿ ನಿಧನರಾದರು. ಕೆಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಆಸ್ಪತ್ರೆಗೂ ದಾಖಲಾಗಿದ್ದರು. ಆದರೆ ಸಂಪೂರ್ಣವಾಗಿ ಚೇತರಿಸಿಕೊಂಡಿರಲಿಲ್ಲ. ಸದಾಶಿವನಗರದ ಅವರ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿ 2.30 ರ ಹೊತ್ತಿಗೆ ವಿಧಿವಶರಾದರು ಎಂದು ಕುಟುಂಬದ ಮೂಲಗಳು ಖಚಿತಪಡಿಸಿವೆ. ಇವರ ನಿಧನಕ್ಕೆ ಪ್ರಧಾನಿ ಮೋದಿ ಅವರಿಂದ ಹಿಡಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರವರೆಗೆ ಎಲ್ಲರೂ ಸಂತಾಪ ಸೂಚಿಸಿದ್ದಾರೆ.
ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರದ ಅಂತಿಮದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದ್ದು ಸದಾಶಿವನಗರದಲ್ಲಿ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಮಂಡ್ಯ ಜಿಲ್ಲೆ ಮದ್ದೂರಿನ ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಬುಧವಾರ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಗಳಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸೋಮನಹಳ್ಳಿ ಮಲ್ಲಯ್ಯ ಕೃಷ್ಣ (1 ಮೇ 1932 – 10 ಡಿಸೆಂಬರ್ 2024) ಓರ್ವ ದೂರದೃಷ್ಟಿಯುಳ್ಳ ಮುತ್ಸದ್ದಿ ರಾಜಕಾರಣಿ ಮತ್ತು ಆಡಳಿತಗಾರ ಎಂದರೆ ಅತಿಶಯೋಕ್ತಿಯಗಲಾರದು. ಅವರು 1999 ರಿಂದ 2004 ರವರೆಗೆ 10 ನೇ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದರು. ಇವರ ಅವಧಿಯಲ್ಲಿ ಬೆಂಗಳೂರಿನಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ವಿಸ್ತರಣೆಯಾಯಿತು. ನಂತರ ಅವರು 2009 ರಿಂದ ಅಕ್ಟೋಬರ್ 2012 ರವರೆಗೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸಿದರು. 2004 ರಿಂದ 2008 ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಡಿಸೆಂಬರ್ 1989 ರಿಂದ ಜನವರಿ 1993 ರವರೆಗೆ ಕರ್ನಾಟಕ ವಿಧಾನಸಭೆ ಎಸ್.ಎಂ.ಕೃಷ್ಣ ಅವರು ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. ಅವರು 1971 ರಿಂದ 2014 ರವರೆಗೆ ವಿವಿಧ ಸಮಯಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರೂ ಆಗಿದ್ದರು. 2023 ರಲ್ಲಿ, ಕೃಷ್ಣ ಅವರಿಗೆ ಭಾರತದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
ಕೃಷ್ಣ ಅವರು 1962 ರಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಘಿ ಗೆಲ್ಲುವ ಮೂಲಕ ರಾಜಕೀಯ ಜೀವನಕ್ಕೆ ಕಾಲಿಟ್ಟರು. ಅಂದಿನ ಪ್ರಧಾನಿ ಜವಾಹರಲಾಲ್ ನೆಹರು ಅವರೇ ಆಗಮಿಸಿ ಪ್ರಚಾರ ಮಾಡಿದ್ದ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಶಂಕರಗೌಡ ಅವರನ್ನು ಸೋಲಿಸಿ ದೆಶದ ಗಮನ ಸೆಳೆದಿದ್ದರು. ನಂತರ ಕೃಷ್ಣ ಅವರು ಪ್ರಜಾ ಸೋಷಿಯಲಿಸ್ಟ್ ಪಕ್ಷ ಸೇರಿದರು.
1980 ರಲ್ಲಿ ಲೋಕಸಭೆಗೆ ಆಯ್ಕೆಯಾದರು. 1983-84 ರ ನಡುವೆ ಇಂದಿರಾ ಗಾಂಧಿಯವರ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದರು. ಅವರು 1985 ರಲ್ಲಿ ಕರ್ನಾಟಕ ವಿಧಾನಸಭೆಗೆ ಮರು ಆಯ್ಕೆಯಾದರು ಮತ್ತು 1989 ಮತ್ತು 1993 ರ ನಡುವೆ ಅವರು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಮತ್ತು 1993 ರಿಂದ 1994 ರವರೆಗೆ ಕರ್ನಾಟಕದ ಉಪಮುಖ್ಯಮಂತ್ರಿಯಾಗಿದ್ದರು.ನಂತರ ಅವರು 1996 ಮತ್ತು 1999 ರಲ್ಲಿ ರಾಜ್ಯಸಭೆಯ ಸದಸ್ಯರಾದರು .
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ 1999 ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವನ್ನು ಗೆಲ್ಲಿಸಿದರು. ಸಹಜವಾಗಿಯೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು.
ಕೃಷ್ಣ ಅವರು ಡಿಸೆಂಬರ್ 2004 ರಲ್ಲಿ ಮಹಾರಾಷ್ಟ್ರದ ಗವರ್ನರ್ ಆಗಿ ನೇಮಕಗೊಂಡರು. ಈ ಹುದ್ದೆಗೆ ರಾಜೀನಾಮೆ ನೀಡಿ ರಾಜ್ಯಸಭೆಗೆ ಪ್ರವೇಶಿಸಿದರು ಮತ್ತು ನಂತರ 22 ಮೇ 2009 ರಂದು ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರ ಅಡಿಯಲ್ಲಿ ಮಂತ್ರಿಗಳ ಪರಿಷತ್ತಿನಲ್ಲಿ ವಿದೇಶಾಂಗ ವ್ಯವಹಾರಗಳ ಕೇಂದ್ರ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಕೃಷ್ಣ ಅವರು 29 ಜನವರಿ 2017 ರಂದು ಐಎನ್ಸಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಮಾರ್ಚ್ 2017 ರಲ್ಲಿ ಔಪಚಾರಿಕವಾಗಿ ಬಿಜೆಪಿ ಪಕ್ಷವನ್ನು ಸೇರ್ಪಡೆಯಾದರು. ಅವರು 7 ಜನವರಿ 2023 ರಂದು ರಾಜಕೀಯದಿಂದ ನಿವೃತ್ತಿ ಘೋಷಿಸಿದರು.