ಭಾವನಗರ (ಗುಜರಾತ್): ಗುಜರಾತ್‌ನ ಭಾವನಗರ ಜಿಲ್ಲೆಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದಾರೆ ಮತ್ತು 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾವನಗರದಿಂದ ಮಹುವಾ ಕಡೆಗೆ ಬಸ್ ತೆರಳುತ್ತಿದ್ದಾಗ ಬೆಳಗ್ಗೆ 6 ಗಂಟೆ ಸುಮಾರಿಗೆ ತ್ರಪಾಜ್ ಗ್ರಾಮದ ಬಳಿ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರ್ಷದ್ ಪಟೇಲ್ ತಿಳಿಸಿದ್ದಾರೆ.
ಬಸ್ ಹಿಂದಿನಿಂದ ಡಂಪರ್ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ, ಎಂಟರಿಂದ ಹತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಬಸ್ಸಿನ ಬಲಭಾಗ ಸಂಪೂರ್ಣ ಜಖಂಗೊಂಡಿದೆ.
ಕಾರು ಲಾರಿ ಮುಖಾಮುಖಿ ಡಿಕ್ಕಿ, 6 ಸಾವು: ಛತ್ತೀಸ್‌ಗಢದ ಬಲೋದ್ ಜಿಲ್ಲೆಯಲ್ಲಿ ಒನ್ ವೇಯಲ್ಲಿ ಬಂದ ಟ್ರಕ್, ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದಾರೆ ಮತ್ತು 7 ಮಂದಿ ಗಾಯಗೊಂಡಿದ್ದಾರೆ. ದೊಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಭಾನುಪ್ರತಾಪುರ-ದಳ್ಳಿರಾಜರ ರಸ್ತೆಯ ಚೌರಪವಾಡ ಬಳಿ ಇಂದು ಮುಂಜಾನೆ ಅಪಘಾತ ಸಂಭವಿಸಿದೆ. ಎದುರಿನಿಂದ ಬರುತ್ತಿದ್ದ ಕಾರಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ರಾಜನಂದಗಾಂವ್ ವೈದ್ಯಕೀಯ ಕಾಲೇಜಿಗೆ ದಖಲಿಸಲಾಗಿದೆ. ಆರೋಪಿ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಮತ್ತು ಆತನ ಶೋಧ ಮುಂದುವರೆದಿದೆ.
ಡಿಕ್ಕಿಯ ರಭಸಕ್ಕೆ ಕಾರು ತೀವ್ರವಾಗಿ ಜಖಂಗೊಂಡಿದೆ. ಅಪಘಾತ ಸಂಭವಿಸಿದ ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯ ನಡೆಸಿದರು.