ಮಹಾತ್ಮಾ ಗಾಂಧೀಜಿ ಬೆಳಗಾವಿ ಅಧಿವೇಶನಕ್ಕೆ ಅಧ್ಯಕ್ಷರಾಗಿದ್ದು ರಾಜ್ಯದ ಭಾಗ್ಯ; ಡಿಕೆಶಿ

Most read

ಬೆಳಗಾವಿ: ನೂರು ವರ್ಷಗಳ ಹಿಂದೆ ಬೆಳಗಾವಿ ಅಧಿವೇಶನದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದು, ಕರ್ನಾಟಕಕ್ಕೆ ಸಿಕ್ಕ ಐತಿಹಾಸಿಕ ಭಾಗ್ಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಬೆಳಗಾವಿ ಸರ್ಕಿಟ್ ಹೌಸ್ ಮತ್ತು ಪೀರನವಾಡಿ ಗಾಂಧಿ ಭವನದ ಬಳಿ ಶಿವಕುಮಾರ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿ ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾಗ ಗಂಗಾಧರ ದೇಶಪಾಂಡೆ ಹಾಗೂ ಜವಹಾರ್ ಲಾಲ್ ನೆಹರೂ ಅವರು ಮಾತ್ರ ಪ್ರಧಾನ ಕಾರ್ಯದರ್ಶಿಗಳಾಗಿದ್ದರು. ಆಗ ದೇಶಪಾಂಡೆ ಅವರು ಬೆಳಗಾವಿಯಲ್ಲಿ ಎಐಸಿಸಿ ಅಧಿವೇಶನ ನಡೆಸಲು ಆಹ್ವಾನ ನೀಡಿದ್ದರು ಎಂದು ನೆನಪಿಸಿಕೊಂಡರು.

ಆಗ ಅಧಿವೇಶನಕ್ಕೆ ಬರುವ ಜನರಿಗೆ ಕುಡಿಯುವ ನೀರಿಗಾಗಿ ಬಾವಿ ತೋಡಲಾಗಿತ್ತು. 100 ವರ್ಷಗಳ ನಂತರ ನಮ್ಮ ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿದ್ದಾರೆ. ಅಂದು ಗಾಂಧಿ, ಇಂದು ಖರ್ಗೆ ಅವರು ಅಧ್ಯಕ್ಷರಾಗಿದ್ದಾರೆ. ಈ ಮಧ್ಯೆ ಅನೇಕ ಮಹಾನ್ ನಾಯಕರು ಆ ಸ್ಥಾನ ಅಲಂಕರಿಸಿದ್ದಾರೆ. ನಿಜಲಿಂಗಪ್ಪ, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ಕೂಡ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದರು. ಈ ಬಾರಿಯ ಅಧಿವೇಶನವನ್ನು ಗುಜರಾತಿನ ಸಬರಮತಿ ಆಶ್ರಮದಲ್ಲಿ ನಡೆಸುವ ಬಗ್ಗೆ ಚರ್ಚೆ ನಡೆಯಿತು. ನಂತರ ನಾನು ಎಐಸಿಸಿಗೆ ಬೆಳಗಾವಿಯಲ್ಲೇ ನಡೆಸುವ ಪ್ರಸ್ತಾವನೆ ಸಲ್ಲಿಸಿದಾಗ ಅವರು ಒಪ್ಪಿದರು ಎಂದರು.

ಗಾಂಧಿ ಭಾರತ ಕಾರ್ಯಕ್ರಮದ ಭಾಗವಾಗಿ ಅ. 2 ರಂದು ರಾಜ್ಯ ಸರ್ಕಾರದ ವತಿಯಿಂದ ಬೆಂಗಳೂರಿನ ಗಾಂಧಿ ಭವನದಿಂದ ವಿಧಾನಸೌಧದ ಗಾಂಧಿ ಪ್ರತಿಮೆವರೆಗೂ ಹೆಜ್ಜೆ ಹಾಕಿದ್ದೆವು. ನಂತರ ಪಕ್ಷದ ವತಿಯಿಂದ ಗಾಂಧಿ ವೃತ್ತದಿಂದ ಭಾರತ ಜೋಡೋ ಭವನದವರೆಗೂ ಹೆಜ್ಜೆ ಹಾಕಲಾಗಿತ್ತು. ಈಗ ಮುಂದುವರಿದ ಭಾಗವಾಗಿ ಡಿ. 26 ರಂದು ಬೆಳಗಾವಿಯಲ್ಲಿ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿಯ ಎಲ್ಲ ಸದಸ್ಯರು, ಎಲ್ಲ ಮುಖ್ಯಮಂತ್ರಿಗಳು, ಶಾಸಕರು, ಸಂಸದರು ಆಗಮಿಸಲಿದ್ದಾರೆ. ಮರುದಿನ ಬೃಹತ್ ಸಾರ್ವಜನಿಕ ಸಮಾವೇಶ ನಡೆಯಲಿದೆ. ಈ ಸಮಾವೇಶಕ್ಕೆ ಪಂಚಾಯ್ತಿ ಸದಸ್ಯರು, ಸಮಿತಿ ಹಾಗೂ ನಿಗಮಗಳ ಸದಸ್ಯರು, ನಾಮನಿರ್ದೇಶಿತರು ಸೇರಿದಂತೆ ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಈ ಮಧ್ಯೆ ಸುವರ್ಣಸೌಧದ ಬಳಿ ಗಾಂಧಿ ಪ್ರತಿಮೆ ಉದ್ಘಾಟನೆ ಮಾಡಲಾಗುತ್ತಿದ್ದು, ಈ ಕಾರ್ಯಕ್ರಮಕ್ಕೆ ಎಲ್ಲ ಪಕ್ಷಗಳ ಶಾಸಕರು ಹಾಗೂ ಪರಿಷತ್ ನಾಯಕರಿಗೂ ಆಹ್ವಾನ ನೀಡಲಾಗುವುದು. ಸ್ಪೀಕರ್ ಹಾಗೂ ಸಭಾಪತಿಗಳ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ಈ ಕಾರ್ಯಕ್ರಮ ನಡೆಯಲಿರುವ ಸ್ಥಳಗಳಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ನಂತರ ಇತರೆ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು. ಅವಕಾಶ ನಮ್ಮನ್ನು ಹುಡುಕಿಕೊಂಡು ಬರುವುದಿಲ್ಲ. ನಾವೇ ಅವಕಾಶಗಳನ್ನು ಹುಡುಕಿಕೊಂಡು ಹೋಗಬೇಕು ಎಂದು ಇಂದಿರಾ ಗಾಂಧಿ ಅವರು ಹೇಳಿದ್ದಾರೆ. ಇಂದಿರಾ ಗಾಂಧಿ ಅವರ ನುಡಿಮುತ್ತುಗಳ ಬಗ್ಗೆ ಸೋನಿಯಾ ಗಾಂಧಿ ಅವರು ಒಂದು ಪುಸ್ತಕ ಬರೆದಿದ್ದಾರೆ. ಆ ಪುಸ್ತಕವನ್ನು ಕನ್ನಡಕ್ಕೆ ಅನುವಾದ ಮಾಡಿಸಿದ್ದು, ಗಾಂಧಿ ಭಾರತ ಕಾರ್ಯಕ್ರಮದ ವೇಳೆ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

More articles

Latest article