ಭೂ ಸ್ವಾಧೀನ ಕೈಬಿಡಲು ಸಿಎಂಗೆ ಮನವಿ ಮಾಡಿದ ದೇವನಹಳ್ಳಿ ತಾಲೂಕಿನ ರೈತರು

Most read

ಬೆಂಗಳೂರು: ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಮನವಿ ಮಾಡಿದೆ.

ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೆಐಎಡಿಬಿ ವತಿಯಿಂದ 13 ಹಳ್ಳಿಗಳ ವ್ಯಾಪ್ತಿಯಲ್ಲಿ 1777 ಎಕರೆ ಜಮೀನು ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದ್ದು, ಈಗಾಗಲೇ ಮೂರು ಬಾರಿ ಭೂಸ್ವಾಧೀನ ಪ್ರಕ್ರಿಯೆ ನಡೆಸಲಾಗಿದೆ. ಆದ್ದರಿಂದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು ಎಂದು ರೈತರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ. ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿ 430 ಎಕರೆ ಜಮೀನು ಭೂಸ್ವಾಧೀನಕ್ಕೆ ಈಗಾಗಲೇ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಅಂತಿಮ ಅಧಿಸೂಚನೆ ಆಗಿರುವ ಜಮೀನು ವಾಪಸು ಪಡೆಯಲು ಸಾಧ್ಯವಿಲ್ಲ. ಸರ್ಕಾರ ರೈತರ ಪರವಾಗಿದ್ದು ಈ ವಿಷಯ ಕುರಿತು ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯವನ್ನು ಸಹ ಪಡೆದುಕೊಂಡು ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಸಚಿವರಾದ ಎಂ.ಬಿ.ಪಾಟೀಲ್, ಕೆ.ಎಚ್.ಮುನಿಯಪ್ಪ, ಐದನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ ನಾರಾಯಣಸ್ವಾಮಿ, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ರೈತ ಪ್ರತಿನಿಧಿಗಳು ಉಪಸ್ಥಿತರಿದ್ದರು.

More articles

Latest article