ಬೆಂಗಳೂರು: ಮಹಿಳೆಯೊಬ್ಬರನ್ನು ಚಾಕುವಿನಿಂದ ಬೆದರಿಸಿ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ ಅಪ್ರಾಪ್ತ ವಯಸ್ಸಿನ ಇಬ್ಬರು ಬಾಲಕರು ಸೇರಿದಂತೆ ಮೂವರನ್ನು ಚಿಕ್ಕಜಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ನಾರಾಯಣಹಳ್ಳಿಯ ಬಾಲಾಜಿ ಬಂಧಿತ ಆರೋಪಿ. ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರನ್ನು ಸರ್ಕಾರಿ ಬಾಲಮಂದಿರಕ್ಕೆ ಒಪ್ಪಿಸಲಾಗಿದೆ. ಇವರಿಂದ ರೂ.9.50 ಲಕ್ಷ ಮೌಲ್ಯದ 120 ಗ್ರಾಂ ತೂಕದ ಮಾಂಗಲ್ಯ ಸರ ಮತ್ತು ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು
ಪೊಲೀಸರು ತಿಳಿಸಿದ್ದಾರೆ.
ಈ ಮಹಿಳೆಯು ತರಬನಹಳ್ಳಿಯ ತನ್ನ ಮನೆಯ ಆವರಣದಲ್ಲಿ ಚೀಲಕ್ಕೆ ರಾಗಿ ತುಂಬುತ್ತಿದ್ದರು. ಆಗ ಆರೋಪಿಗಳು ಬಲವಂತವಾಗಿ ಆಕೆಯನ್ನು ಮನೆಯೊಳಗೆ ಎಳೆದೊಯ್ದು ಬೆದರಿಸಿ, ಸರ ಕಿತ್ತುಕೊಂಡು ಪರಾರಿಯಾಗಿದ್ದರು. ಈಗಾಗಲೇ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ
ಬಾಲಾಜಿ ತನ್ನ ಸಂಬಂಧಿಕರಾದ ಅಪ್ರಾಪ್ತ ವಯಸ್ಸಿನ ಇಬ್ಬರು ಬಾಲಕರನ್ನು ಜತೆಯಲ್ಲಿ ಸೇರಿಸಿಕೊಂಡು ಅಪರಾಧ ಕೃತ್ಯಗಳನ್ನು ಎಸಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.