ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ.
2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಜಾರ್ಖಂಡ್‌ನ ಚಾಯ್‌ಬಾಸಾ ಎಂಬಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೊಲೆಗಾರ ಎಂದು ಕರೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತ ನವೀನ್ ಝಾ ಎಂಬುವವರು ಪ್ರಕರಣ ದಾಖಲಿಸಿದ್ದರು. ದೂರಿಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ರದ್ದುಗೊಳಿಸುವಂತೆ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು ಜಾರ್ಖಂಡ್ ಸರ್ಕಾರ ಮತ್ತು ಬಿಜೆಪಿ ಮುಖಂಡರಿಗೆ ನೋಟಿಸ್ ಜಾರಿ ಮಾಡಿದ್ದು, ಅರ್ಜಿಯ ಬಗ್ಗೆ ಪ್ರತಿಕ್ರಿಯೆ ಕೇಳಿದೆ.