ಗುವಾಹಟಿ: ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿ ಲೋಕಸಭೆ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆದರೆ ಇದೊಂದು ರಾಜಕೀಯ ಗಿಮಿಕ್ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಇತ್ತೀಚೆಗೆ ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕೇಂದ್ರ ಕಚೇರಿ ಉದ್ಘಾಟನೆ ನೆರವೇರಿಸಿದ ರಾಹುಲ್ ಗಾಂಧಿ ಅವರು, ಆರ್ಎಸ್ಎಸ್ ಮತ್ತು ಬಿಜೆಪಿ ಪ್ರತಿಯೊಂದು ಸಂಸ್ಥೆಯನ್ನು ತಮ್ಮ ಹಿಡಿತದಲ್ಲಿಟ್ಟುಕೊಂಡಿವೆ. ನಾವು ಈಗ ಆರ್ಎಸ್ಎಸ್, ಬಿಜೆಪಿ , ಭಾರತ ಸರ್ಕಾರದ ವಿರುದ್ಧ ಹೋರಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಉಲ್ಲೇಖಿಸಿ ಮೊಂಜಿತ್ ಚೇಟಿಯಾ ಎಂಬ ವಕೀಲರೊಬ್ಬರು ಅಸ್ಸಾಂನ ಪನ್ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ದೇಶದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ದುರ್ಬಲಗೊಳಿಸಲು ಮತ್ತು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರದ ವಿರುದ್ಧ ದಂಗೆಯನ್ನು ಪ್ರಚೋದಿಸುವ ನಿಟ್ಟಿನಲ್ಲಿ ಉದ್ದೇಶಪೂರ್ವಕವಾಗಿಯೇ ಇಂತಹ ಹೇಳಿಕೆಗಳನ್ನು ನೀಡಿದ್ದಾರೆ. ಇವರಿಗೆ ಪ್ರಜಾಸತ್ತಾತ್ಮಕ ವಿಧಾನಗಳ ಮೂಲಕ ಜನರ ನಂಬಿಕೆ ಗಳಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅಸಮಾಧಾನವನ್ನು ಈ ರೀತಿ ಹೊರಹಾಕುವ ಮೂಲಕ ಪ್ರಚೋದಿಸುತ್ತಿದ್ದಾರೆ ಎಂದು ಮೊಂಜಿತ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅಸ್ಸಾಂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ದೇಬಬ್ರತ ಸೈಕಿಯಾ, ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಎಫ್ಐಆರ್ ರಾಜಕೀಯ ಗಿಮಿಕ್ ಮಾತ್ರ. ಬಿಜೆಪಿ ವಿರುದ್ಧ ಧ್ವನಿ ಎತ್ತಿದ ಕಾರಣ ಆ ಪಕ್ಷದ ಪರವಾಗಿ ಯಾರೋ ಒಬ್ಬರು ಪ್ರಕರಣ ದಾಖಲಿಸಿದ್ದಾರೆ ಎಂದು ಹೇಳಿದ್ದಾರೆ.