ಬೆಂಗಳೂರು: 11 ವರ್ಷದ ಬಾಲಕನ ಮೇಲೆ 70 ವರ್ಷದ ವೃದ್ಧನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ವಿದ್ಯಾರಣ್ಯ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ. ಆರೋಪಿ ರಾಮ್ ಮನೋಹರ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯ ಪೋಕ್ಸೊ (ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ದೇವಸ್ಥಾನವೊಂದರ ಎದುರಿನಲ್ಲಿ ಆರೋಪಿ ತಳ್ಳುವ ಗಾಡಿಯಲ್ಲಿ ಪೂಜಾ ಸಾಮಗ್ರಿಗಳನ್ನು ಮಾರಾಟ ಮಾಡುತ್ತಿದ್ದ. ಈ ಸ್ಥಳದ ಸಮೀಪವೇ ಸಂತ್ರಸ್ತ ಬಾಲಕನ ಮನೆಯಿತ್ತು. ಬಾಲಕನ ಪರಿಚಯ ಮಾಡಿಕೊಂಡ ರಾಮ್ ಮನೋಹರ್ ಆತನನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಾಲಕ ಮನೆಗೆ ಬಂದು ವಿಷಯ ತಿಳಿಸಿದ್ದಾನೆ. ನಂತರ ಬಾಲಕನ ಪೋಷಕರು ನೀಡಿದ ದೂರಿನ ಆಧಾರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.