ಬೆಂಗಳೂರು: ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗೆ ಆರೋಪಪಟ್ಟಿ ದಾಖಲಿಸಲೇಬೇಕು. ಯಾರಾದರೂ ನ್ಯಾಯಾಲಯದಿಂದ ತಡೆಯಾಜ್ಞೆ ತಂದರೆ ಕೂಡಲೇ ಅಡ್ವೊಕೇಟ್ ಜನರಲ್ ಜೊತೆ ಚರ್ಚಿಸಿ ತಡೆಯಾಜ್ಞೆ ತೆರವುಗೊಳಿಸಬೇಕು ಎಂದು ಸಿಎಂ ಸ್ಪಷ್ಟ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಷಯ ತಿಳಸಿದರು.
ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಹಲವು ದಶಕಗಳಿಂದ ಶೇ.3ಕ್ಕಿಂತ ಹೆಚ್ಚಾಗಿಲ್ಲ. ಈ ಕಾರಣಕ್ಕೆ DCRE ಸೆಲ್ ಗಳಿಗೆ ಪೊಲೀಸ್ ಠಾಣೆ ಶಕ್ತಿ ನೀಡಿದ್ದಾಗಿದೆ. ಇನ್ನೂ ಶಿಕ್ಷೆ ಪ್ರಮಾಣ ಹೆಚ್ಚಾಗದಿದ್ದರೆ ಹೇಗೆ? ಪ್ರಕರಣಗಳ ತನಿಖೆಯ ಗುಣಮಟ್ಟದ ಬಗ್ಗೆ ಗಮನ ಹರಿಸಲು ಸಿಎಂ ಸೂಚಿಸಿದರು.
ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಕಡಿಮೆ ಇದೆ. ಕೌಂಟರ್ ಕೇಸ್ ಗಳಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್ ಅವರು ಅಸಮಾಧಾನದಿಂದ ಸಭೆಯಲ್ಲಿ ಪ್ರಶ್ನಿಸಿದರು. ಮೂರುವಿಶೇಷ ನ್ಯಾಯಾಲಯಗಳಿಗೆ ಮಾತ್ರ ಅನುಮತಿ ಸಿಕ್ಕಿದೆ. ಇನ್ನೂ 24 ವಿಶೇಷ ನ್ಯಾಯಾಲಯಗಳಿಗೆ ಅನುಮತಿ ದೊರೆತಿಲ್ಲ ಎಂದು ಮುಖ್ಯಮಂತ್ರಿಗಳ ಗಮನ ಸೆಳೆದರು. ಬಳಿಕ ಈ ಬಗ್ಗೆ ತಾವು ತೀವ್ರವಾಗಿ ಗಮನಿಸಿ ಬಾಕಿ ನ್ಯಾಯಾಲಯಗಳಿಗೆ ಬೇಗ ಅನುಮತಿ ಸಿಗುವ ದಿಕ್ಕಿನಲ್ಲಿ ಗಮನ ಹರಿಸುವುದಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ತಿಳಿಸಿದರು.
ರಾಯಚೂರಿನ ಅಂಬೇಡ್ಕರ್ ವೃತ್ತದಲ್ಲಿ ಪ್ರಗತಿಪರ ಸಂಘಟನೆಗಳ ಕ್ರಿಯಾ ಸಮಿತಿ ಅಡಿಯಲ್ಲಿ ನಡೆಯುತ್ತಿರುವ ಮಹಿಳೆಯರ ಅಹೋರಾತ್ರಿ ಧರಣಿ ವಿಚಾರವನ್ನು ಮುಖ್ಯಮಂತ್ರಿಗಳು ಈ ಸಭೆಯಲ್ಲಿ ಪ್ರಸ್ತಾಪಿಸಿದರು. ದೇವದಾಸಿ ಮಹಿಳೆಯರಿಗೆ ಪುನರ್ವಸತಿ ಕಲ್ಪಿಸಬೇಕು, ವೈಜ್ಞಾನಿಕವಾಗಿ ದೇವದಾಸಿ ಮಹಿಳೆಯರ ಸ್ಥಿತಿ ಗತಿ ಬಗ್ಗೆ ಸಮೀಕ್ಷೆ ನಡೆಸಬೇಕು ಎನ್ನುವುದು ಪ್ರತಿಭಟನಾ ನಿರತರ ಬೇಡಿಕೆಯಾಗಿದೆ ಎಂದು ಉಲ್ಲೇಖಿಸಿದ ಮುಖ್ಯಮಂತ್ರಿಗಳು ದೇವದಾಸಿಯರ ಪುನರ್ವಸತಿ ಸಮಸ್ಯೆ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಕೇಳಿದರು
ಈ ಬಗ್ಗೆ ಕೆಲ ಹೊತ್ತು ಚರ್ಚೆ ನಡೆದ ಬಳಿಕ ದೇವದಾಸಿ ಸಮಸ್ಯೆ ಮತ್ತು ಪುನರ್ವಸತಿ ಬಗ್ಗೆ ಸಮಗ್ರ ವರದಿ ಸಿದ್ದಪಡಿಸಲು ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದರು. ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಹಕ್ಕು ಪತ್ರ ಸಮರ್ಪಕವಾಗಿ ನೀಡಬೇಕು. ಯಾವುದೇ ಕಾರಣಕ್ಕೂ ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು ಎಂದು ಸೂಚಿಸಿದರು. ಸಭೆಗೆ ಅಧಿಕಾರಿಗಳು ನೀಡಿರುವ ಅನುಪಾಲನಾ ವರದಿಯಲ್ಲಿ ಮುಂದಿನ ಬಾರಿ ಜಿಲ್ಲಾವಾರು ಅಂಕಿ ಅಂಶ ನಮೂದಿಸಲು ಸೂಚಿಸಲಾಯಿತು