ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ಮೌನಿ ಅಮಾವಾಸ್ಯೆಯಾದ ಇಂದು ತ್ರಿವೇಣಿ ಸಂಗಮದಲ್ಲಿ ಸಂಭವಿಸಿರುವ ಕಾಲ್ತುಳಿತದ ದುರಂತಕ್ಕೆ ಕೇಂದ್ರ ಮತ್ತು ಉತ್ತರ ಪ್ರದೇಶದ ಸರ್ಕಾರಗಳೇ ಕಾರಣ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಮಹಾಕುಂಭಮೇಳವನ್ನು ಉತ್ತಮ ರೀತಿಯಲ್ಲಿ ನಿರ್ವಹಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣ ವೈಫಲ್ಯವಾಗಿವೆ ಎಂದೂ ಅವರು ಆಪಾದಿಸಿದ್ದಾರೆ.
ಮೌನಿ ಅಮಾವಾಸ್ಯೆ ದಿನವಾದ ಇಂದು ತ್ರಿವೇಣಿ ಸಂಗಮದಲ್ಲಿ ಪ್ರವಿತ್ರ ಸ್ನಾನ ಮಾಡಲು ಲಕ್ಷ ಲಕ್ಷ ಜನ ಪ್ರಯಾಗ್ರಾಜ್ನಲ್ಲಿ ಸೇರಿದ್ದಾರೆ. ಇನ್ನೂ ಜನಸಾಗರ ಹರಿದು ಬರುತ್ತಲೇ ಇದೆ. ಇಲ್ಲಿ ಉಂಟಾದ ಕಾಲ್ತುಳಿತದಲ್ಲಿ ಹಲವರು ಮೃತಪಟ್ಟಿರುವ ಶಂಕೆಗಳಿವೆಯಾದರೂ ನಿಖರ ಮಾಹಿತಿ ಲಭ್ಯವಾಗಿಲ್ಲ. ಸಾವು ನೋವಿನ ಅಧಿಕೃತ ವರದಿ ಇನ್ನಷ್ಟೇ ಬರಬೇಕಿದೆ.
ಈ ಅವ್ಯವಸ್ಥೆ ಕುರಿತು ಪ್ರತಿಕ್ರಿಯೆ ನೀಡಿರುವ ಮಲ್ಲಿಕಾರ್ಜುನ ಖರ್ಗೆ, ಮಹಾಕುಂಭ ಮೇಳದಲ್ಲಿ ನಡೆದ ಕಾಲ್ತುಳಿತದಲ್ಲಿ ಹಲವರು ಗಾಯಗೊಂಡಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಗಾಯಾಳುಗಳು ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಹಲವು ಭಕ್ತರು ಮೃತಪಟ್ಟಿದ್ದಾರೆ ಎಂಬ ಅನುಮಾನಗಳಿದ್ದು ಸರ್ಕಾರ ಕೂಡಲೇ ಮಾಹಿತಿ ಒದಗಿಸಬೇಕು ಎಂದೂ ಒತ್ತಾಯಿಸಿದ್ದಾರೆ.
ಸಂತ್ರಸ್ತರಿಗೆ ನೆರವಾಗಲು ಮುಂದಾಗಬೇಕು ಎಂದು ಅವರು ವಂತೆಯೂ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಸಮರ್ಪಕ ವ್ಯವಸ್ಥೆ ಇಲ್ಲದೇ ಇರುವುದು, ವಿಐಪಿ ಚಲನವಲನ, ಸ್ವಯಂ ಪ್ರಚಾರಕ್ಕೆ ಹೆಚ್ಚಿನ ಆದ್ಯತೆ ನೀಡಿರುವುದು ಮತ್ತು ಕೆಟ್ಟ ನಿರ್ವಹಣೆಯೇ ಕಾಲ್ತುಳಿತ ಅವಘಡಕ್ಕೆ ಕಾರಣವಾಗಿದೆ. ಸಾವಿರಾರು ಕೋಟಿ ರೂಪಾಯಿ ವೆಚ್ಚ ಮಾಡಿದರೂ ಇಂತಹ ಕೆಟ್ಟ ವ್ಯವಸ್ಥೆ ಮಾಡಿರುವುದು ನಿಜಕ್ಕೂ ಖಂಡನಾರ್ಹ ಎಂದು ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಇನ್ನೂ ಅನೇಕ ‘ಪವಿತ್ರ ಸ್ನಾನ’ ಬಾಕಿಯಿವೆ. ಈಗಲಾದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಭವಿಷ್ಯದಲ್ಲಿ ಇಂತಹ ಅಹಿತಕರ ಘಟನೆಗಳು ನಡೆಯದಂತೆ ವ್ಯವಸ್ಥೆಯಲ್ಲಿ ಸುಧಾರಣೆ ತರಬೇಕಿದೆ’ ಎಂದು ಅವರು ಆಗ್ರಹಿಸಿದ್ದಾರೆ.
‘ಭಕ್ತಾದಿಗಳ ವಸತಿ, ಆಹಾರ, ಪ್ರಥಮ ಚಿಕಿತ್ಸೆ, ಸಂಚಾರ ಇತ್ಯಾದಿ ವ್ಯವಸ್ಥೆಗಳಲ್ಲಿ ಸುಧಾರಣೆ ತರಬೇಕು. ವಿಐಪಿ ಚಲನವಲನಕ್ಕೆ ಲಗಾಮು ಹಾಕಬೇಕು. ನಮ್ಮ ಸಾಧು ಸಂತರು ಅದನ್ನೇ ಬಯಸುತ್ತಾರೆ’ ಎಂದು ಅವರು ಹೇಳಿದ್ದಾರೆ.