ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧದ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಸಿಟಿ ರವಿ ವಿರುದ್ಧ ದೂರು ಸಲ್ಲಿಸಿದ್ದು ಪೊಲೀಸರು ಎಫ್ ಐಆರ್ ದಾಖಲಿಸಿದ್ದರು. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ವಿಧಾನ ಪರಿಷತ್ ಅಧಿವೇಶನ ನಡೆಯುತ್ತಿದ್ದ ಡಿಸೆಂಬರ್ 19 ರಂದು ಅಧಿವೇಶನದಲ್ಲೇ ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು ಸಚವರು ದೂರು ನೀಡಿದ್ದರು.
ಎಫ್ಐಆರ್ ರದ್ದುಪಡಿಸಬೇಕು ಎಂದು ಕೋರಿ ಸಿ.ಟಿ.ರವಿ ಸಲ್ಲಿಸಿದ್ದ ಅರ್ಜಿಯನ್ನು, ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠದ (ಧಾರವಾಡ) ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ವಿಚಾರಣೆ ನಡೆಸಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ಪ್ರಕರಣದಲ್ಲಿ ಸಾಕಷ್ಟು ವಿಚಾರಗಳು
ಅಡಗಿರುವುದರಿಂದ ಅವುಗಳನ್ನೆಲ್ಲಾ ಸೂಕ್ತ ರೀತಿಯಲ್ಲಿ ಪರಿಶೀಲಿಸಿ ವಿಚಾರಣೆ
ನಡೆಸಬೇಕಿದೆ. ಒಂದೇಬಾರಿ ವಿಚಾರಣೆ ನಡೆಸಿ ತೀರ್ಮಾನ ಕೈಗೊಳ್ಳಲಾಗದು ಎಂದು ತಿಳಿಸಿ ವಿಚಾರಣೆಯನ್ನು ಫೆಬ್ರುವರಿ 20ಕ್ಕೆ ಮುಂದೂಡಿತು.
ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಸಮನ್ಸ್ ಜಾರಿಗೊಳಿಸಲು ನಿರ್ದೇಶನ ನೀಡಲಾಗಿದ್ದು ಆಕ್ಷೇಪಣೆ ಸಲ್ಲಿಸಲು ಸೂಚಿಸಲಾಗಿದೆ. ರವಿ ಪರ ಹಿರಿಯ ವಕೀಲ ಪ್ರಭುಲಿಂಗ ಕೆ.ನಾವದಗಿ ಹಾಗೂ ಪ್ರಾಸಿಕ್ಯೂಷನ್ ಪರ ರಾಜ್ಯ ಪ್ರಾಸಿಕ್ಯೂಟರ್ ಬಿ.ಎ.ಬೆಳ್ಳಿಯಪ್ಪ ವಾದ ಮಂಡಿಸಿದರು.ನಾವದಗಿ ವಾದಿಸಿ ಸದನದ ಒಳಗೆ ನಡೆದಿರುವ ಪ್ರಕ್ರಿಯೆಗಳನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವಂತಿಲ್ಲ. ಸದನದ ಸದಸ್ಯರಿಗೆ ರಕ್ಷಣೆ ಇದೆ ಎಂದರು.
ಬೆಳ್ಳಿಯಪ್ಪ ವಾದಿಸಿ ಸದನದ ಒಳಗೆ ನಡೆದ ಒರಕ್ರಿಯೆಗಳನ್ನು ಕುರಿತು ನ್ಯಾಯಾಲಯದಲ್ಲಿ ಪ್ರಶ್ನಿಸಿರುವ ಅನೇಕ ಪ್ರಕರಣಗಳಿವೆ ಮತ್ತು ನ್ಯಾಯಾಲಯಗಳು ತೀರ್ಪು ನೀಡಿರುವ ಉದಾಹರಣೆಗಳಿವೆ ಎಂದು ತಿಳಿಸಿದರು.