ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಆಯ್ಕೆ

Most read

ನವದೆಹಲಿ: ಚುನಾವಣಾ ಆಯುಕ್ತ  ಜ್ಞಾನೇಶ್ ಕುಮಾರ್ ಅವರನ್ನು ಸೋಮವಾರ ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. ಚುನಾವಣಾ ಆಯೋಗದ ಸದಸ್ಯರ ನೇಮಕಾತಿಯ ಹೊಸ ಕಾನೂನಿನಡಿಯಲ್ಲಿ ನೇಮಕಗೊಂಡ ಮೊದಲ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರಾಗಲಿದ್ದಾರೆ. ಇವರು ರಾಜೀವ್ ಕುಮಾರ್ ಅವರ ಸ್ಥಾನವನ್ನು ಅಲಂಕರಿಸಿದ್ದಾರೆ. ಅವರ ಅಧಿಕಾರಾವಧಿ ಜನವರಿ 26, 2029 ರವರೆಗೆ ಇರುತ್ತದೆ. 

26 ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಅವಧಿಯಲ್ಲಿ, ಜ್ಞಾನೇಶ್ ಕುಮಾರ್ ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗಳು ಮತ್ತು 2026 ರಲ್ಲಿ ನಡೆಯಲಿರುವ ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗಳ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

ಐಐಟಿ-ಕಾನ್ಪುರದ ಹಳೆಯ ವಿದ್ಯಾರ್ಥಿಯಾಗಿರುವ ಕುಮಾರ್ ಅವರು 1988ನೇ ಬ್ಯಾಚ್‌ನ ಕೇರಳ ಕೇಡರ್‌ನ ಐಎಎಸ್‌ ಅಧಿಕಾರಿ. ಅವರು ಕೇರಳದ ಎರ್ನಾಕುಳಂ ಜಿಲ್ಲೆಯಲ್ಲಿ ಸಹಾಯಕ ಕಲೆಕ್ಟರ್ ಆಗಿ ಕೆಲಸ ಮಾಡಿದ್ದಾರೆ. ಅಲ್ಲದೇ ಕೇರಳ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದರ್ಶಿಯಾಗಿಯೂ ಅವರು ಕೆಲಸ ನಿರ್ವಹಿಸಿದ್ದಾರೆ. ರಕ್ಷಣಾ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ, ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಹಾಗೂ ಹೆಚ್ಚುವರಿ ಕಾರ್ಯದರ್ಶಿಯಾಗಿ, ಸಂಸದೀಯ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿಯಾಗಿ, ಸಹಕಾರ ಸಚಿವಾಲಯದ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೆಯ ವಿಧಿಯ ಅಡಿಯಲ್ಲಿ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸುವ ತೀರ್ಮಾನವನ್ನು ಅನುಷ್ಠಾನಕ್ಕೆ ತರುವಲ್ಲಿ ಕುಮಾರ್ ಪ್ರಮುಖ ಪಾತ್ರ ವಹಿಸಿದ್ದರು. 2024ರ ಮಾರ್ಚ್‌ 15ರಂದು ಇವರನ್ನು ಚುನಾವಣಾ ಆಯುಕ್ತರನ್ನಾಗಿ (ಇ.ಸಿ) ನೇಮಿಸಲಾಗಿತ್ತು.

More articles

Latest article