ಬೆಂಗಳೂರು: ಫೆಬ್ರವರಿ 28 ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳು ಮತ್ತು ಸರಕಾರಿ ಕಚೇರಿಗಳಲ್ಲಿ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲು ರಾಜ್ಯ ಸರಕಾರದ ವತಿಯಿಂದ ಸುತ್ತೋಲೆ ಹೊರಡಿಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಬೆಂಗಳೂರು ನಗರದ ಜವಾಹರ ಲಾಲ್ ನೆಹರು ತಾರಾಲಯದಲ್ಲಿ ಫೆ. 28 ರಂದು ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 10:30 ಕ್ಕೆ ವೈಜ್ಞಾನಿಕ ಮನೋಭಾವನೆ ಮತ್ತು ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವ ಪ್ರತಿಜ್ಞಾ ವಿಧಿಯನ್ನು ಭೋಧಿಸಲಾಗುವುದು.
ಇದೇ ವೇಳೆ, ರಾಜ್ಯದ ಎಲ್ಲಾ ಶಾಲಾ – ಕಾಲೇಜುಗಳಲ್ಲೂ ವಿದ್ಯಾರ್ಥಿಗಳಿಗೆ ಹಾಗೂ ಸರಕಾರಿ ಕಚೇರಿಗಳಲ್ಲಿ ಏಕಕಾಲಕ್ಕೆ ಈ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಸುತ್ತೋಲೆಯನ್ನು ಹೊರಡಿಸಲಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಸಮೃದ್ದ ಶಾಂತಿಯುತ, ಪ್ರಗತಿಪರ ಸಮಾಜ ಮತ್ತು ದೇಶ ನಿರ್ಮಾಣದಲ್ಲಿ ಮಹತ್ತರ ಪಾತ್ರ ವಹಿಸಿದೆ. ಸಮಾಜದಲ್ಲಿ ಶಾಂತಿ ಮತ್ತು ಬ್ರಾತೃತ್ವವನ್ನು ಬೆಸೆಯುವ ಹಿನ್ನಲೆಯಲ್ಲಿ ವೈಜ್ಞಾನಿಕ ಮನೋಭಾವದ ನೆಲೆಗಟ್ಟನ್ನು ಸಾರ್ವಜನಿಕರಲ್ಲಿ ಬೆಳೆಸುವುದು ಅತ್ಯಾವಶ್ಯಕವಾಗಿದ್ದು ಭಾರತದ ಸಂವಿಧಾನದ ಮೂಲಭೂತ ಕರ್ತವ್ಯಗಳಲ್ಲಿ ಒಂದಾಗಿದೆ ಎಂದು ತಮ್ಮ ಹೇಳಿಕೆಯಲ್ಲಿ ಮಾನ್ಯ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದ್ದಾರೆ.
ರಾಷ್ಟ್ರೀಯ ವಿಜ್ಞಾನ ದಿನವನ್ನ ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಿಂದ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.