ಇಸ್ರೇಲ್ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ: ಹೇಯ ಕೃತ್ಯ ಮರುಕಳಿಸದಂತೆ ಎಚ್ಚರ: ಸಿಎಂ ಭರವಸೆ

Most read

ಬೆಂಗಳೂರು: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲ್‌ ಮಹಿಳೆ ಹಾಗೂ ಹೋಮ್‌ ಸ್ಟೇ ಒಡತಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ ಪೊಲೀಸರಿಂದ ಮಾಹಿತಿ ಪಡೆದು, ಕಟ್ಟುನಿಟ್ಟಿನ ತನಿಖೆ ಕೈಗೊಂಡು ಅಪರಾಧಿಗಳನ್ನು ಶೀಘ್ರ ಪತ್ತೆಹಚ್ಚುವಂತೆ ಸೂಚಿಸಿದ್ದೆ. ಪ್ರಕರಣದ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ ಎಂದು ಅವರು ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

ರಾಜ್ಯಕ್ಕೆ ಬರುವ ಪ್ರವಾಸಿಗರು ಸೇರಿದಂತೆ ಪ್ರತಿಯೊಬ್ಬರಿಗೂ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲಾ ಅಗತ್ಯ ಕ್ರಮ ವಹಿಸಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.

ಗಂಗಾವತಿ ತಾಲ್ಲೂಕಿನ ಪ್ರವಾಸಿ ತಾಣ ಸಾಣಾಪುರ ಕೆರೆ ಬಳಿ ಜಂಗ್ಲಿಗೆ ತೆರಳುವ ಮಾರ್ಗದಲ್ಲಿ ಗುರುವಾರ ರಾತ್ರಿ ತುಂಗಭದ್ರಾ ಎಡದಂಡೆ ಕಾಲುವೆ ಪಕ್ಕ ಗಿಟಾರ್ ಬಾರಿಸುತ್ತ ಕುಳಿತಿದ್ದ ಐವರು ಪ್ರವಾಸಿಗರ ಪೈಕಿ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಇಲ್ಲಿನ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಸ್ರೇಲ್‌ನ 27 ವರ್ಷದ ಪ್ರವಾಸಿ ಮಹಿಳೆ ಮತ್ತು 29 ವರ್ಷದ ಸ್ಥಳೀಯ ಹೋಮ್‌ ಸ್ಟೇ ಒಡತಿ ಮೇಲೆ ಅತ್ಯಾಚಾರ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇನ್ನುಳಿದ ಮೂವರು ಪ್ರವಾಸಿಗರ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಅದರಲ್ಲಿ ಒಡಿಶಾದ ಪ್ರವಾಸಿಗನನ್ನು ಕಾಲುವೆಗೆ ಎಸೆಯಲಾಗಿದ್ದು, ಆತನ ಪತ್ತೆಗಾಗಿ ಶೋಧ ಮುಂದುವರಿದಿದೆ. ನಾಲ್ಕು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಸಿಕೊಂಡಿದ್ದಾರೆ.

ಇಸ್ರೇಲ್‌, ಅಮೆರಿಕ, ಮಹಾರಾಷ್ಟ್ರ ಮತ್ತು ಒಡಿಶಾದಿಂದ ನಾಲ್ವರು ಪ್ರವಾಸಿಗರು ಮತ್ತು ಸ್ಥಳೀಯ ಹೋಂ ಸ್ಟೇ ಒಡತಿ ರಾತ್ರಿ ಸಂಗೀತ ಮತ್ತು ನಕ್ಷತ್ರಗಳನ್ನು ವೀಕ್ಷಿಸುತ್ತಾ ಕೆರೆಯ ಸೌಂದರ್ಯ ಆನಂದಿಸುತ್ತಿದ್ದರು. ಆಗ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಮೊದಲು ತಮ್ಮ ವಾಹನಗಳಿಗೆ ಪೆಟ್ರೋಲ್‌ ಹಾಕಿಸುವಂತೆ ಹೇಳಿ ಬಳಿಕ ಹಣಕ್ಕೆ ಬೇಡಿಕೆಯಿಟ್ಟರು. ಇದಕ್ಕೆ ನಿರಾಕರಿಸಿದಾಗ ಆರೋಪಿಗಳು ನಿಂದಿಸಿದ್ದರಿಂದ ಜಗಳವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇಬ್ಬರ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಸಂತ್ರಸ್ತೆ ದೂರು ನೀಡಿದ್ದಾರೆ. ಮಹಿಳೆಯರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿ ಬಂದ ಬಳಿಕ ಮುಂದಿನ ಕ್ರಮ ವಹಿಸಲಾಗುತ್ತದೆ. ಅತ್ಯಾಚಾರ, ಸಾಮೂಹಿಕ ಅತ್ಯಾಚಾರ, ಕೊಲೆಗೆ ಯತ್ನ ಕಾಯ್ದೆಗಳಡಿ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ರಾಮ್‌ ಎಲ್‌. ಅರಸಿದ್ಧಿ ತಿಳಿಸಿದ್ದಾರೆ.

More articles

Latest article