ಬೆಂಗಳೂರು: ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಬೆಳಿಕಿಗೆ ಬಂದ ಬೆನ್ನಲ್ಲೇ ಆದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೂ .38.4 ಕೋಟಿ ರೂ. ಮೌಲ್ಯದ 3.2 ಕೆಜಿ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಘಾನಾ ಮೂಲದ ಜೆನ್ನಿಫರ್ ಅಬ್ಬೇ ಎಂಬಾಕೆಯನ್ನು ಬಂಧಿಸಲಾಗಿದೆ. ಈಕೆ ಕತಾರ್ ನ ದೋಹಾದಿಂದ ಬೆಂಗಳೂರಿಗೆ ಬಂದಿಳಿದಿದ್ದರು. ವಿಮಾನ ನಿಲ್ದಾಣದಲ್ಲಿ ಡಿಆರ್ಐ ಅಧಿಕಾರಿಗಳು ಜೆನ್ನಿಫರ್ ಅಬ್ಬೇಯನ್ನು ತಪಾಸಣೆಗೆ ಒಳಪಡಿಸಿದಾಗ ನಿಷೇಧಿತ ಡ್ರಗ್ ಕೊಕೇನ್ ಪತ್ತೆಯಾಗಿದೆ. ಕೂಡಲೇ ಡಿಆರ್ಐ ಅಧಿಕಾರಿಗಳು ಜೆನ್ನಿಫರ್ ಅಬ್ಬೇಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
3 ಕೋಟಿ ಮೌಲ್ಯದ ಸಿಂಥೆಟಿಕ್ ಡ್ರಗ್ಸ್ ಜಪ್ತಿ:
ಇತ್ತೀಚಿಗೆ ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಇಬ್ಬರು ವಿದೇಶಿ ಡ್ರಗ್ ಪೆಡ್ಲರ್ಗಳನ್ನು ಬಂಧಿಸಿ ಅವರಿಂದ ರೂ. 3 ಕೋಟಿ ಮೌಲ್ಯದ ಸಿಂಥೆಟಿಕ್ ಡ್ರಗ್ಸ್ ಜಪ್ತಿ ಮಾಡಿದ್ದರು. ಆರೋಪಿಗಳು ಸೋಲದೇವನಹಳ್ಳಿಯ ಮನೆಯೊಂದರಲ್ಲಿ ಡ್ರಗ್ಸ್ ಸಂಗ್ರಹಿಸಿದ್ದರು. ಖಚಿತ ಮಾಹಿತಿ ಆಧರಿಸಿ ಸಿಸಿಬಿ ಅಧಿಕಾರಿಗಳು ಡ್ರಗ್ಸ್ ಸಂಗ್ರಹಿಸಿಟ್ಟಿದ್ದ ಮನೆ ಮೇಲೆ ದಾಳಿ ಮಾಡಿದ್ದರು. ದಾಳಿ ವೇಳೆ, 1 ಕೆಜಿ 520 ಗ್ರಾಂ ಎಂಡಿಎಂಎ ಕ್ರಿಸ್ಟಲ್, 202 ಗ್ರಾಂ ಕೊಕೇನ್, 12 ಗ್ರಾಂ ಎಂಡಿಎಂಎ ಎಕ್ಸೆಟೆಸಿ ಪಿಲ್ಸ್ ಪತ್ತೆಯಾಗಿತ್ತು. ಕೂಡಲೆ ಸಿಸಿಬಿ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ, ಮಾದಕ ವಸ್ತು ಜಪ್ತಿ ಮಾಡಿದ್ದಾರೆ.