ಶಹಾಪುರ : ಬೊಲೆರೋ ಹಾಗೂ ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಯಾದಗಿರಿ ಜಿಲ್ಲೆ ಶಹಾಪುರ ತಾಲೂಕು ಮದ್ದರಕಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ರಸ್ತೆ ಅಪಘಾತ ಸಂಭವಿಸಿದೆ.
ಮೃತರನ್ನು ಚಾಲಕ ಶರಣಪ್ಪ (30), ಸುನೀತಾ (19), ಸೋಮವ್ವ (50), ತಂಗಮ್ಮ (50) ಎಂದು ಗುರುತಿಸಲಾಗಿದೆ. ಬೊಲೆರೋ ವಾಹನದಲ್ಲಿ ಕಲಬುರಗಿಯ ಘತ್ತರಗಿ ಭಾಗ್ಯವಂತಿ ದೇವರ ಕಾರ್ಯಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಭೀಮರಾಯನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ದುರಂತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೊಲೆರೋ ವಾಹನದಲ್ಲಿದ್ದ ಇತರ ಪ್ರಯಾಣಿಕರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.