ಜಾತಿ ಗಣತಿ: ಸಂಜೆ ಸಚಿವ ಸಂಪುಟ ಸಭೆ: ಪರಾಮರ್ಶೆಗೆ ನಿವೃತ್ತ ನ್ಯಾಯಮೂರ್ತಿ ಸಮಿತಿ/ ಸಚಿವ ಸಂಪುಟ ಉಪ ಸಮಿತಿ ರಚನೆ ಸಂಭವ?

Most read

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ- 2015 (ಜಾತಿ ಗಣತಿ) ವರದಿ ಕುರಿತು ಚರ್ಚಿಸಲು ಇಂದು ಸಂಜೆ ನಾಲ್ಕು ಗಂಟೆಗೆ ಸಚಿವ ಸಂಪುಟದ ವಿಶೇಷ ಸಭೆ ನಡೆಯಲಿದೆ. ಈ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗದ ಹಿಂದಿನ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರು ಸರ್ಕಾರಕ್ಕೆ ಸಲ್ಲಿಸಿದ್ದರು. ಈ ವರದಿಯನ್ನು ಏಪ್ರಿಲ್ 11ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗಿತ್ತು.

ಆಯೋಗದ ಶಿಫಾರಸಿನಂತೆ ಹಾಲಿ ಜಾರಿಯಲ್ಲಿರುವ ಹಿಂದುಳಿದ ವರ್ಗಗಳ ಪ್ರವರ್ಗವಾರು ಮೀಸಲಾತಿ ಪ್ರಮಾಣವನ್ನು ಶೇ. 32ರಿಂದ ಶೇ 51ಕ್ಕೆ ಹೆಚ್ಚಿಸಲು ಅಂಗೀಕಾರ ನೀಡಬೇಕು. ಇದಕ್ಕೆ ಕೇಂದ್ರ ಸರ್ಕಾರದ ಒಪ್ಪಿಗೆ ಪಡೆಯಬೇಕೆಂಬ ಈ ಪ್ರಸ್ತಾವವನ್ನು ಸಚಿವ ಸಂಪುಟ ಸಭೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮಂಡಿಸಿದೆ ಎಂದು ತಿಳಿದು ಬಂದಿದೆ.

ವರದಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ವಿವಿಧ ಸಮುದಾಯಗಳ ಸಚಿವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲಿದ್ದಾರೆ. ಈಗಾಗಲೇ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯದ ಸಚಿವರು ವರದಿ ಅನುಷ್ಟಾನಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಆಯಾ ಸಮುದಾಯಗಳ ‌ಸಚಿವರು ವರದಿಯನ್ನು ಅಂಗೀಕರಿಸದಂತೆ ಪಟ್ಟು ಹಿಡಿಯಲಿದ್ದಾರೆ. ಸಮೀಕ್ಷೆಯು ವೈಜ್ಞಾನಿಕವಾಗಿ ನಡೆದಿದ್ದು, ಅನುಮೋದನೆ ನೀಡುವಂತೆ ಹಿಂದುಳಿದ ವರ್ಗಕ್ಕೆ ಸೇರಿದ ಸಚಿವರು ಆಗ್ರಹಪಡಿಸಬಹುದು. ಅಂತಿಮವಾಗಿ, ಅಧ್ಯಯನ ವರದಿಯ ಪರಾಮರ್ಶೆಗೆ ನಿವೃತ್ತ ನ್ಯಾಯಮೂರ್ತಿಯ ನೇತೃತ್ವದಲ್ಲಿ ಸಮಿತಿ ಅಥವಾ ಸಚಿವ ಸಂಪುಟ ಉಪ ಸಮಿತಿ ರಚಿಸುವ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

More articles

Latest article