ಬೆಂಗಳೂರು: ಬೆಂಗಳೂರು-ಮೈಸೂರು ಮೂಲಸೌಲಭ್ಯ ಕಾರಿಡಾರ್ ಯೋಜನೆಯ ಅನುಷ್ಠಾನ ಹಾಗೂ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪರಾಮರ್ಶಿಸಿ ಸೂಕ್ತ ಶಿಫಾರಸ್ಸುಗಳನ್ನು ಮಾಡಲು ರಾಜ್ಯ ಸರ್ಕಾರ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಏಳು ಸಚಿವರ ಸಚಿವ ಸಂಪುಟ ಉಪಸಮಿತಿ ರಚಿಸಲಾಗಿದೆ.
ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್.ಕೆ ಪಾಟೀಲ್, ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಹೆಚ್ ಮುನಿಯಪ್ಪ, ಬಹೃತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್, ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಕಂದಾಯ ಸಚಿವ ಕೃಷ್ಣ ಭೈರೇಗೌಡ ಸಮಿತಿ ಸದಸ್ಯರಾಗಿದ್ದಾರೆ.
ಈ ಸಚಿವ ಸಂಪುಟ ಉಪಸಮಿತಿಯು ಕಾನೂನು ತಜ್ಞರು ಹಾಗೂ ತಜ್ಞರೊಂದಿಗೆ ಚರ್ಚಿಸಿ ಕಾನೂನಾತ್ಮಕವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿ ಎರಡು ತಿಂಗಳೊಳಗಾಗಿ ವರದಿ ಸಲ್ಲಿಸಲಿದೆ.
ನೈಸ್ ಯೋಜನೆ ವಿವರ:
ಬೆಂಗಳೂರು-ಮೈಸೂರು ನಡುವೆ 111 ಕಿಮೀ ಎಕ್ಸಪ್ರೆಸ್ ವೇ ನಿರ್ಮಾಣಕ್ಕೆ ನೈಸ್ ಸಂಸ್ಥೆಗೆ ಗುತ್ತಿಗೆ ನೀಡಲಾಗಿದೆ. ಮೂರು ದಶಕಗಳ ಗುತ್ತಿಗೆ ಅವಧಿ ಮುಗಿಯುವ ಹಂತದಲ್ಲಿದೆ. ನೈಸ್ ಯೋಜನೆಗೆ ಸಂಬಂಧಿಸಿದಂತೆ 374 ಭೂವ್ಯಾಜ್ಯ ಪ್ರಕರಣಗಳು ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಉಳಿದಿವೆ.
ಈ ಬಿಎಂಐಸಿ ಯೋಜನೆಯನ್ನು ಮುಂದುವರೆಸಬೇಕೇ? ನೈಸ್ ಕಂಪನಿಯಿಂದ ಹೆಚ್ಚುವರಿ ಭೂಮಿ ಹಿಂಪಡೆಯಬೇಕೇ? ಎಂಬ ಎಲ್ಲ ಅಂಶಗಳನ್ನು ಕುರಿತು ಪರಿಶೀಲಿಸಲು ಉಪಸಮಿತಿ ರಚಿಸಲು ಕಳೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.