ಬೆಂಗಳೂರು: ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (68) ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಹೆಚ್ ಎಸ್ ಆರ್ ಲೇ ಔಟ್ ನಿವಾಸದಲ್ಲಿ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದ ದೃಶ್ಯ ಮನಕಲಕುವಂತಿತ್ತು. ಓಂಪ್ರಕಾಶ್ ಅವರನ್ನು ಅವರ ಪತ್ನಿ ಪಲ್ಲವಿ ಅವರೇ ಹತ್ಯೆ ಮಾಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
1981ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದ ಓಂ ಪ್ರಕಾಶ್ ಅವರು 2015ರಲ್ಲಿ ರಾಜ್ಯದ 38ನೇ ಡಿಜಿ ಮತ್ತು ಐಜಿಪಿಯಾಗಿದ್ದರು. 2017 ರಲ್ಲಿ ನಿವೃತ್ತಿ ಹೊಂದಿದ್ದರು.
ಹತ್ಯೆ ಮಾಡಿದ ಬಳಿಕ ಪ್ಲಲವಿ ಅವರೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಓಂ ಪ್ರಕಾಶ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಮನೆಯ ಕೊಠಡಿಯೊಂದರಲ್ಲಿ ಪತ್ನಿ ಮತ್ತು ಪುತ್ರಿ ಬಾಗಿಲು ಹಾಕಿಕೊಂಡಿದ್ದು, ತೆರೆಯುತ್ತಿಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ. ಬಲ್ಲ ಮೂಲಗಳ ಪ್ರಕಾರ ಪತಿ ಮತ್ತು ಪತ್ನಿ ನಡುವೆ ಹೊಂದಾಣಿಕೆ ಇರಲಿಲ್ಲ ಎನ್ನಲಾಗುತ್ತಿದೆ. ಆಸ್ತಿ ವಿವಾದವೂ ಕಾರಣ ಎಂದು ತಿಳಿದು ಬಂದಿದೆ. ವೈಯಕ್ತಿಕ ಕಾರಣಗಳಿಗಾಗಿ ಕಳೆದ ಕೆಲವು ದಿನಗಳಿಂದ ಇಬ್ಬರ ನಡುವೆ ಜೋರು ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಐಪಿಎಸ್ ಅಧಿಕಾರಿಗಳ ವಾಟ್ಸಾಪ್ ಗುಂಪಿನಲ್ಲಿ ಇಬ್ಬರೂ ತಮಗೆ ಕೊಲೆ ಬೆದರಿಕೆ ಇದೆ ಎಂದು ಸಂದೇಶ ಹಾಕಿದ್ದರು.