ಹುಬ್ಬಳ್ಳಿ: ‘ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ಮುಂದಿನ ಮೂರು ತಿಂಗಳ ಒಳಗಾಗಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ ಹೇಳಿದರು. ಇಲ್ಲಿನ ಕಾಂಗ್ರೆಸ್ ಕಚೇರಿಗೆ ಮಂಗಳವಾರ ಭೇಟಿ ನೀಡಿದ ಬಳಿಕ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
‘ಗ್ರಾಮ ಪಂಚಾಯಿತಿ ಹಾಗೂ ಪುರಸಭೆಗಳಿಗೆ 8 ತಿಂಗಳಲ್ಲಿ ಚುನಾವಣೆ ನಡೆಸಲಿದ್ದೇವೆ. ಹಿಂದಿನ ಬಿಜೆಪಿ ಸರ್ಕಾರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಿರಲಿಲ್ಲ. ಕ್ಷೇತ್ರ ಮರುವಿಂಗಡಣೆ ಹಾಗೂ ಮೀಸಲಾತಿ ವಿಷಯದಲ್ಲಿ ಸಾಕಷ್ಟು ಗೊಂದಲ ಸೃಷ್ಟಿ ಮಾಡಿತ್ತು. ನ್ಯಾಯಾಲಯದ ಮೆಟ್ಟಿಲು ಏರಿತ್ತು. ಈ ಎಲ್ಲ ಸಮಸ್ಯೆಗಳನ್ನು ನಮ್ಮ ಸರ್ಕಾರ ಬಗೆಹರಿಸಿದ್ದು, ಚುನಾವಣೆಗಳನ್ನು ನಡೆಸಲು ಅಗತ್ಯ ತಯಾರಿ ಮಾಡಿಕೊಳ್ಳುತ್ತಿದ್ದೇವೆ. ಅಧಿಕಾರ ವಿಕೇಂದ್ರೀಕರಣ ಆಗಬೇಕು ಎನ್ನುವುದು ಕಾಂಗ್ರೆಸ್ ಸಿದ್ಧಾಂತ’ ಎಂದು ಹೇಳಿದರು.