ಬೆಂಗಳೂರು: ರಾಜ್ಯದಲ್ಲಿ ರ‍್ಯಾಪಿಡೋ, ಉಬರ್ ಬೈಕ್ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ ಹೊರಡಿಸಿದ್ದಾರೆ. ಆರು ವಾರಗಳ ಒಳಗೆ ಎಲ್ಲ ತರಹದ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಅವರು ಸಾರಿಗೆ ಇಲಾಖೆ ಕಾರ್ಯದರ್ಶಿಗೆ, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಈ ಮೂಲಕ ರಾಜ್ಯದ ಆಟೋ ಮತ್ತು ಕ್ಯಾಬ್ ಚಾಲಕರ ಹಲವಾರು ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿದೆ.
ಬೈಕ್ ಟ್ಯಾಕ್ಸಿ ಸೇವೆ ಮುಂದುವರಿಸುವ ಅನುಮತಿಗೆ ನಿರ್ದೇಶನ ನೀಡಬೇಕು ಎಂದು ‘ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್’, ‘ರೊಪ್ಪೆನ್ ಟ್ರಾನ್ಸ್‌ಪೋರ್ಟೇಶನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್’ ಮತ್ತು ‘ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್’ ಕಂಪನಿಗಳು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದವು.
ಈ ಅರ್ಜಿಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್, ‘ಮೋಟಾರು ವಾಹನ ಕಾಯ್ದೆ–1988ರ ಕಲಂ 93ರ ಅನುಸಾರ ರಾಜ್ಯ ಸರ್ಕಾರ ಸೂಕ್ತ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸುವ ತನಕ ಸಂಬಂಧಿತ ಸಂಸ್ಥೆಗಳಾದ ಓಲಾ, ಉಬರ್ ಮತ್ತು ರ‍್ಯಾಪಿಡೊಗಳು ತಮ್ಮ ಬೈಕ್ ಟ್ಯಾಕ್ಸಿ ಸೇವೆಯನ್ನು ಆರು ವಾರಗಳ ಒಳಗಾಗಿ ನಿರ್ಬಂಧಿಸಬೇಕು’ ಎಂದು ಏಪ್ರಿಲ್ 2 ರಂದು ಆದೇಶ ನೀಡಿತ್ತು. ಈ ಆದೇಶವನ್ನು ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ರಾಮಲಿಂಗಾರೆಡ್ಡಿ ಲಿಖಿತವಾಗಿ ತಿಳಿಸಿದ್ದಾರೆ.