ಬೆಳಗಾವಿ: ದೇಶಕ್ಕೆ ಕಂಟಕವಾಗಿರುವ ಉಗ್ರರನ್ನು ಮಟ್ಟಹಾಕಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಉಗ್ರರನ್ನು ಸದೆ ಬಡಿಯಲು ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡರೂ ಬೆಂಬಲ ನೀಡಲಾಗುವುದು ಎಂದರು.
ಉಗ್ರರನ್ನು ಮಟ್ಟಹಾಕುವ ವಿಷಯದಲ್ಲಿ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ನಮ್ಮ ನಾಯಕರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ ಈಗಾಗಲೇ ಹೇಳಿದ್ದಾರೆ. ಉಗ್ರರನ್ನು ಮಟ್ಟಹಾಕುವುದೇ ನಮ್ಮೆಲ್ಲರ ಉದ್ದೇಶವಾಗಿದೆ ಎಂದು ಸಚಿವರು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ನಂಬಿಸಿ ಅಮಾಯಕರಿಗೆ ವಂಚಿಸುತ್ತಿರುವುದು ನನ್ನ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಖುದ್ದು ನಾನೇ ದೂರು ನೀಡಿದ್ದೇನೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.